
ಬೆಂಗಳೂರು, ಮಾ. ೨೩- ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವು ಏರ ತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ.
ಈ ಎರಡು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ಆಡಳಿತರೂಢ ಕಾಂಗ್ರೆಸ್ ಮತ್ತು ವಿಪಕ್ಷವಾದ ಬಿಜೆಪಿ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲೂ ಇಂದು ಬಿ ಫಾರಂ ಸಮೇತ ತಮ್ಮ ಉಮೇದುವಾರಿಕೆಗಳನ್ನು ಸಲ್ಲಿಸಿದ್ದು, ಉಪಚುನಾವಣೆಗೆ ಅಖಾಡ ಸಜ್ಜಾಗಿದೆ.
ಈ ಎರಡು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯು ಆಡಳಿತರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿಯ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಿದ್ದು, ಎರಡೂ ಪಕ್ಷಗಳ ಅಭ್ಯರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಪ್ರಮುಖ ಮುಖಂಡರುಗಳು ಉಪಸ್ಥಿತರಿದ್ದು, ನಾಮಪತ್ರ ಸಲ್ಲಿಕೆಯ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾದರು.
ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಪ್ರಮುಖ ನಾಯಕರುಗಳು ಉಪಸ್ಥಿತರಿದ್ದು, ಉಪಚುನಾವಣೆಯ ಜಿದ್ದಾಜಿದ್ದಿನ ಹೋರಾಟಕ್ಕೆ ಪುಷ್ಠಿ ನೀಡಿದರು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪುತ್ರ ಹಾಗೂ ದಿ. ಶಾಮನೂರು ಶಿವಶಂಕರಪ್ಪನವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ ಕರಿಯಪ್ಪ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್‌ನ ಹಲವು ಪ್ರಮುಖ ನಾಯಕರುಗಳು ಉಪಸ್ಥಿತರಿದ್ದರು.
ಬಿಜೆಪಿಯ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪನವರು ಇಂದು ದೊಡ್ಡ ಸಂಖ್ಯೆಯಲ್ಲಿ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಈ ಕ್ಷೇತ್ರದಲ್ಲಿ ಈ ಇಬ್ಬರು ಅಭ್ಯರ್ಥಿಗಳು ಕಳೆದ ಶುಕ್ರವಾದ ಶುಭದಿನವೆಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಪಕ್ಷದ ಬಿ ಫಾರಂ ಸಮೇತ ಅಧಿಕೃತವಾಗಿ ಪಕ್ಷದ ಅಭ್ಯರ್ಥಿಯಾಗಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು.
ಬಾಗಲಕೋಟೆಯಲ್ಲೂ ನಾಮಪತ್ರ
ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿ ಮಠ ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ದಿ. ಹೆಚ್.ವೈ. ಮೇಟಿಯವರ ಕಿರಿಯ ಪುತ್ರ ಉಮೇಶ್ ಮೇಟಿ ಸಹ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಯ ಉಮೇದುವಾರಿಕೆ ಸಲ್ಲಿಕೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ನಾಯಕರುಗಳು ಉಪಸ್ಥಿತರಿದ್ದರು. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿದ್ದರು.
ಈ ಉಪಚುನಾವಣೆಗೆ ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಮಾ. ೨೬ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ನಾಳೆ ನಾಮಪತ್ರ ಪರಿಶೀಲನೆ ನಡೆಯಲಿದೆ.
ಏ. ೯ ರಂದು ಈ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ ೪ ರಂದು ಮತ ಏಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.































