
ಬೆಂಗಳೂರು, ನ.೧೧- ಬೀಗದ ಹಾಕಿದ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ್ದ ಕುಖ್ಯಾತ ಕಳ್ಳನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ೬೬.೮೪ ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
ವಿವೇಕನಗರದ ಶ್ರೀನಿವಾಸನ್ ಅಲಿಯಾಸ್ ಶಿವ(೩೩) ಬಂಧಿತ ಆರೋಪಿಗಳಾಗಿದ್ದು, ಆತನಿಂದ ೬೬.೮೪ ಲಕ್ಷ ಮೌಲ್ಯದ ೪೬೧ ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಎಲೆಕ್ಟ್ರಾನಿಕ್ ಸಿಟಿಯ ಬಸಾಪುರ ಮುಖ್ಯರಸ್ತೆಯ ವಿವೇಕಾನಂದನಗರದ ಎಬನೇಜರ್ ಕಳೆದ ಸೆ.೧೯ರಂದು ತಮ್ಮ ಮಗನಿಗೆ ಆರೋಗ್ಯ ಸರಿಯಿಲ್ಲದ ಕಾರಣ ಮನೆಗೆ ಬೀಗ ಹಾಕಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದು ಮರುದಿನ ಸೆ.೨೦ರಂದು ಅವರ ಪತ್ನಿ ಮನೆಗೆ ಬಂದು ನೋಡಿದಾಗ, ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಅಪರಿಚಿತರು ಒಳನುಗ್ಗಿ, ಬೀರುವಿನಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಪರಿಶೀಲನೆ ನಡೆಸಿ, ಖಚಿತ ಮಾಹಿತಿ ಮೇರೆಗೆ ಅ.೧೨ರಂದು ವಿಟ್ಟಸಂದ್ರ ರಸ್ತೆಯ ಹಾಲೋ ಬ್ಲಾಕ್ ಫ್ಯಾಕ್ಟರಿ ಸಮೀಪ ಓರ್ವ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿರುವುದಾಗಿಯೂ ತಿಳಿಸಿದ್ದಾನೆ.
ಅ.೧೩ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ೧೦ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ವಿಚಾರಣೆ ವೇಳೆ ಕಳವು ಮಾಡಿದ್ದ ಚಿನ್ನಾಭರಣಗಳನ್ನು ನೀಲಸಂದ್ರದ ವಿವೇಕಾನಂದನಗರದಲ್ಲಿರುವ ತನ್ನ ಮನೆಯಲ್ಲಿ ಇಟ್ಟಿರುವುದಾಗಿ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮತ್ತು ಬೆಂಗಳೂರಿನ ನಾಗವಾರದ ಆಭರಣ ಮಳಿಗೆಗಳಲ್ಲಿ ಸ್ನೇಹಿತರ ಮೂಲಕ ಮಾರಾಟ ಮಾಡಿಸಿರುವುದಾಗಿ ಮಾಹಿತಿ ನೀಡಿದ್ದಾನೆ.
ಆರೋಪಿಯ ಮಾಹಿತಿ ಮೇರೆಗೆ ಅ.೧೪ರಿಂದ ೨೧ರವರೆಗೆ ಒಟ್ಟು ೪೬೧ ಗ್ರಾಂ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ಬಂಧನದಿಂದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಒಂದು ಮನೆ ಕಳ್ಳತನ ಪ್ರಕರಣ ಹಾಗೂ ಹೆಬ್ಬಗೋಡಿ ಪೊಲೀಸ್ ಠಾಣೆಯ ಒಂದು ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ಪತ್ತೆಯಾಗಿವೆ.
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ವಿಭಾಗದ ಡಿಸಿಪಿ ನಾರಾಯಣ್.ಎಂ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತ ಕೆ.ಎಂ. ಸತೀಶ್ ನೇತೃತ್ವದಲ್ಲಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಇನ್ಸ್ಪೆಕ್ಟರ್ ಅಜರುದ್ದೀನ್ ಮತ್ತವರ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಬಂಧಿಸಿದೆ ಎಂದು ತಿಳಿಸಿದರು.
























