
ಸೈದಾಪುರ:ಗರ್ಭಾವಸ್ಥೆಯಿಂದಲೇ ತಾಯಿ ಮತ್ತು ಮಗುವಿನ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಡಾ. ಮಖಾ ಮಹದ್ ಅಲಿ ತಿಳಿಸಿದರು.
ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ ಪೋಷಣ ಅಭಿಯಾನ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ತಾಯಿ-ಮಗು ಆರೋಗ್ಯ, ಪೌಷ್ಟಿಕ ಆಹಾರ ಸೇವನೆ, ರಕ್ತಹೀನತೆ ತಡೆ ಹಾಗೂ ಲಸಿಕಾಕರಣದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪೋಷಣ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದೆ ಎಂದರು.
ಕಡೇಚೂರು ವಲಯ ಮೇಲ್ವಿಚಾರಕಿ ಶ್ರೀಮತಿ ಸೌಭಾಗ್ಯ ಮಾತನಾಡಿ, ಮಕ್ಕಳಿಗೆ ಅಗತ್ಯವಾದ ಪೌಷ್ಟಿಕ ಆಹಾರ ದೊರೆಯದಿದ್ದರೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಗರ್ಭಿಣಿಯರು, ಬಾಣಂತಿಯರು, ಹದಿಹರೆಯದವರು ಹಾಗೂ ವಯಸ್ಕರು ಪೌಷ್ಟಿಕಾಂಶದ ಕೊರತೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಒಳಗಾಗಬಹುದು. ಆದ್ದರಿಂದ ಪ್ರತಿಯೊಬ್ಬರೂ ಸಮತೋಲಿತ ಆಹಾರ ಸೇವನೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಸೈದಾಪುರ ಆರೋಗ್ಯ ಸಿಬ್ಬಂದಿಗಳಾದ ದೇವೇಂದ್ರಪ್ಪ, ಶೇಕ್ ಉಸ್ಮಾನ್, ದೇವಪ್ಪ, ಕವಿತಾ, ಕಸ್ತೂರಿ ಹಾಗೂ ಲಕ್ಷ್ಮೀಬಾಯಿ, ಮುಖ್ಯೋಪಾಧ್ಯಾಯ ದೇವಪ್ಪ, ಅಂಗನವಾಡಿ ಕಾರ್ಯಕರ್ತೆ ಭಾಗ್ಯ ವಡವಟ್, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು ಹಾಗೂ ಬಾಣಂತಿಯರು ಭಾಗವಹಿಸಿದ್ದರು.

























