
ಬೆಂಗಳೂರು, ನ. ೧೬- ರಾಜ್ಯ ವಿಧಾನಪರಿಷತ್ಗೆ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿದ್ದ ನಾಲ್ವರು ಪರಿಷತ್ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಕಳೆದ ಅಕ್ಟೋಬರ್ನಲ್ಲಿ ವಿಧಾನಪರಿಷತ್ನ ನಾಲ್ಕು ಸ್ಥಾನಗಳಿಗೆ ನಡೆದಿದ್ದ ಚುನಾವಣೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ನ ಎ.ಪಿ. ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಶಶಿಲ್ ಜಿ. ನಮೋಶಿ, ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಎಸ್.ವಿ. ಸಂಕನೂರ ಮತ್ತು ಆಗ್ನೇಯ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಕೆ. ಎಂ.ಸುರೇಶ್ ಆಯ್ಕೆಯಾಗಿದ್ದರು. ಈ ನಾಲ್ವರು ಇಂದು ವಿಧಾನಪರಿಷತ್ ಸದಸ್ಯರಾಗಿ ಪರಿಷತ್ನ ಸಭಾಪತಿ ಸಲೀಂ ಅಹಮದ್, ಉಪಸಭಾಪತಿ ಉಮಾಶ್ರೀ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಭಾಗಿಯಾಗಿ ನೂತನ ಪರಿಷತ್ ಸದಸ್ಯರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಆಶೋತ್ತರಗಳಿಗೆ ಧ್ವನಿಯಾಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹಾಗೂ ಪದವೀಧರ ಯುವಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನೂತನ ಸದಸ್ಯರು ಪರಿಣಾಮಕಾರಿ ಕಾರ್ಯನಿರ್ವಹಿಸಲಿ ಎಂದು ಹೇಳಿದರು.
ವಿಧಾನಪರಿಷತ್ನ ಘನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಡಿಯುವ ಮೂಲಕ ರಾಜ್ಯದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ನೂತನ ಸದಸ್ಯರು ತಮ್ಮದೇ ಆದ ಕೊಡುಗೆ ನೀಡಲಿ ಎಂದು ಅವರು ಆಶಿಸಿದರು.




















