
ನವದೆಹಲಿ, ನ.೨೮:ಮಹಿಳೆಯರಿಗೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಭರವಸೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಈ ಮೀಸಲಾತಿ ಜಾರಿಗೆ ಎದುರಾಗಿರುವ ಎಲ್ಲ ಅಡೆತಡೆಗಳನ್ನು ನಿವಾರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗಳನ್ನು ಸಂಸತ್ತಿನಲ್ಲಿ ಮುಂದಕ್ಕೆ ಕೊಂಡೊಯ್ಯಲು ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲೇ ಪ್ರಧಾನಿಯವರ ಈ ಹೇಳಿಕೆ ಮಹತ್ವ ಪಡೆದಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಇಂದು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಹೋರಾಟ ಹಲವು ದಶಕಗಳಿಂದ ನಡೆಯುತ್ತಿದೆ. ಈ ಕುರಿತು ದೇಶದ ಅನೇಕ ಮಹಿಳೆಯರು ಪತ್ರಗಳ ಮೂಲಕ ಹಾಗೂ ವೈಯಕ್ತಿಕ ಭೇಟಿಗಳ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ಮತ್ತು ಬೇಡಿಕೆಗಳನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಮಹಿಳೆಯರ ರಾಜಕೀಯ ಭಾಗವಹಿಸುವಿಕೆಗೆ ಅಡ್ಡಿಯಾಗಿರುವ ಪ್ರತಿಯೊಂದು ತಡೆಯನ್ನೂ ನಿವಾರಿಸಲು ಸರ್ಕಾರ ಬದ್ಧವಾಗಿದೆ. ಮಹಿಳಾ ಮೀಸಲಾತಿಯನ್ನು ವಿರೋಧಿಸುವ ರಾಜಕೀಯ ಪಕ್ಷಗಳಿಂದ ದೇಶದ ನಾರಿಶಕ್ತಿಯು ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದನ್ನು ತಡೆಯಲು ಸಾಧ್ಯವಿಲ್ಲ. ಇದು ಜಾರಿಯಾಗಲು ಸ್ವಲ್ಪ ಸಮಯದ ಪ್ರಶ್ನೆಯಷ್ಟೇ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರತಿಯೊಂದು ಹಂತದಲ್ಲೂ ಮಹಿಳೆಯರಿಗೆ ನೀಡಿದ ಭರವಸೆಯನ್ನು ಈಡೇರಿಸುವ ಸಂಕಲ್ಪ ಸರ್ಕಾರಕ್ಕಿದೆ. ದೇಶದಾದ್ಯಂತ ಮಹಿಳೆಯರ ಬೆಂಬಲವೂ ಸರ್ಕಾರಕ್ಕೆ ಇದೆ ಎಂದು ಅವರು ತಿಳಿಸಿದ್ದಾರೆ.























