Home ಜಿಲ್ಲೆ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಬೇಕು: ಶಾಸಕ ತುನ್ನೂರ

ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಬೇಕು: ಶಾಸಕ ತುನ್ನೂರ

ಯಾದಗಿರಿ: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಅಭಿಯಾನ ಜಾರಿಗೊಳಿಸಲಾಗಿದೆ. ಅಧಿಕಾರಿಗಳು ಯಾವುದೇ ನೆಪ ಹೇಳದೆ ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಸೂಚಿಸಿದರು.
ಶಹಾಪುರ ತಾಲೂಕಿನ ದೋರನಹಳ್ಳಿ ಪಟ್ಟಣದ ಆದಿ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾನ್ಯ ಜನರು ತಮ್ಮ ಸಣ್ಣಪುಟ್ಟ ಕೆಲಸಗಳಿಗಾಗಿ ಸರ್ಕಾರಿ ಕಚೇರಿಯಿಂದ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿವಾರಣೆಯಾಗಬೇಕು. ಆಡಳಿತ ವ್ಯವಸ್ಥೆ ಜನಸ್ನೇಹಿಯಾಗಿದ್ದು, ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸರ್ಕಾರಿ ಸೌಲಭ್ಯಗಳು ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ, ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು.
ಕಂದಾಯ, ಆರೋಗ್ಯ, ಶಿಕ್ಷಣ, ಜೆಸ್ಕಾಂ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುವ ಪ್ರವೃತ್ತಿ ಸಲ್ಲದು. ಸರ್ಕಾರದ ಆಶಯದಂತೆ ಆಡಳಿತ ಯಂತ್ರ ಜನರ ಬಳಿಗೆ ತೆರಳಿ ಸೇವೆ ಒದಗಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಅಭಿಯಾನದ ಸಂದರ್ಭದಲ್ಲಿ ದೋರನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ, ಚರಂಡಿ ಸ್ವಚ್ಛತೆ, ರಸ್ತೆ ದುರಸ್ತಿ, ಬೀದಿದೀಪ ಅಳವಡಿಕೆ, ಗ್ರಾಮಗಳ ಸ್ವಚ್ಛತೆ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನ, ಬೆಳೆ ಪರಿಹಾರ, ವಿದ್ಯುತ್ ಕಂಬಗಳ ಅಳವಡಿಕೆ ಹಾಗೂ ಹಾಳಾದ ವಿದ್ಯುತ್ ತಂತಿಗಳ ದುರಸ್ತಿ ಸೇರಿದಂತೆ ವಿವಿಧ ಮೂಲಸೌಕರ್ಯ ಮತ್ತು ಸಾರ್ವಜನಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಒಟ್ಟು 133 ಅಹವಾಲುಗಳನ್ನು ಸ್ವೀಕರಿಸಲಾಯಿತು.
ಸ್ವೀಕರಿಸಿದ ಅಹವಾಲುಗಳ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಸಮಸ್ಯೆಗಳ ಸ್ವರೂಪಕ್ಕೆ ಅನುಗುಣವಾಗಿ ತ್ವರಿತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ನ್ಯಾಯಯುತ ಪರಿಹಾರ ಒದಗಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ಇಒ ಬಸವರಾಜ ಶರಬಯಿ, ಟಿಎಚ್‌ಒ ರಮೇಶ ಗುತ್ತೇದಾರ್, ಸಿಪಿಐ ಎಸ್.ಎಂ. ಪಾಟೀಲ್, ಉಪತಹಸೀಲ್ದಾರ್ ಶ್ರೀನಾಥ ಚವ್ಹಾಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಲ್ಲಿಕಾರ್ಜುನ, ಎಂ. ಸಿರವಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಪಟ್ಟಣದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.