
ಬೆಂಗಳೂರು, ಫೆ. ೧೦- ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ನೇತೃತ್ವದ ನಿಯೋಗ ಲೋಕಸಭಾ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದಾರೆ.
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದು ಆರೋಪಿಸಿ ನಿಯಮ ೯೪ರ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ೧೧೯ ಸದಸ್ಯರು ಸಹಿ ಹಾಕಿರುವ ಪತ್ರವನ್ನು ಸದನದ ಕಾರ್ಯದರ್ಶಿಗೆ ನೀಡಿದೆ.
ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರಿಗೆ ಲೋಕಸಭೆಯಲ್ಲಿ ಮಾತನಾಡಲು ಸ್ಪೀಕರ್ ಓಂ ಬಿರ್ಲಾ ಅವಕಾಶ ನೀಡಿಲ್ಲ ಎಂದು ಪ್ರತಿಪಕ್ಷದ ಸದಸ್ಯರು ಆರೋಪಿಸಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ, ಕೋಲಾಹಲ ಉಂಟಾಗಿ ಕಲಾಪಕ್ಕೆ ಅಡ್ಡಿಯುಂಟಾಗಿತ್ತು.
ಇದಕ್ಕೂ ಮುನ್ನ ಬಿಜೆಪಿಯ ಮಹಿಳಾ ಸಂಸದರು ಫೆ. ೪ ರಂದು ಸದನದಲ್ಲಿ ಗದ್ದಲವೆಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಪ್ರತಿಪಕ್ಷಗಳ ಸದಸ್ಯರ ವಿರುದ್ಧ ನಿಯಮಗಳ ಅನುಸಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.

























