
ಬೆಂಗಳೂರು, ನ. ೨೮- ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು, ಈ ಮಸೂದೆ ಜಾರಿಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ವಿಧಾನಸೌಧದಲ್ಲಿಂದು ಜಪಾನ್ ಪ್ರವಾಸದ ಫಲಶೃತಿ ಬಗ್ಗೆ ವಿವರ ನೀಡಲು ಕರೆಯಲಾಗಿದ್ದು ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಮರು ವಿಂಗಣೆಯ ಮಸೂದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ ಅವರು, ನಾನು ಇಂದು ರಾತ್ರಿ ದೆಹಲಿಗೆ ತೆರಳುತ್ತಿದ್ದೇನೆ. ನಾಳೆ ದೆಹಲಿಯಲ್ಲಿ ತೆಲಂಗಾಣ ಮುಖ್ಯಮಂತ್ರಿ ರೇವಂತರೆಡ್ಡಿ, ಕೇರಳ ಮುಖ್ಯಮಂತ್ರಿ ಸತೀಶನ್ ರವರ ಜತೆ ಸುದ್ದಿಗೋಷ್ಠಿ ನಡೆಸಿ ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಯಾವ ರೀತಿ ಅನ್ಯಾಯವಾಗುತ್ತದೆ ಎಂಬ ವಿವರಗಳನ್ನು ನೀಡುತ್ತೇನೆ ಎಂದರು.
ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಎನ್ಡಿಎ ರಾಜಕೀಯ ಮಾಡುತ್ತಿದೆ. ಅವರು ರಾಜಕಾರಣ ಮಾಡಲಿ, ಇದರಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲಿದ್ದು, ಈ ರಾಜ್ಯಗಳು ಅಲ್ಪಸಂಖ್ಯಾತರಾಗಲಿವೆ. ನಾವು ನಮ್ಮ ರಾಜ್ಯಗಳ ಹಿತಾಸಕ್ತಿಗಾಗಿ ಧ್ವನಿ ಎತ್ತುತ್ತೇವೆ ಎಂದರು.
ನಮ್ಮ ಧ್ವನಿಯನ್ನು ಯಾರೂ ಅಡಗಿಸಲು ಸಾಧ್ಯವಿಲ್ಲ. ದೇಶದ ಪ್ರಗತಿಗೆ ದಕ್ಷಿಣ ರಾಜ್ಯಗಳು ಶಕ್ತಿ ತುಂಬುತ್ತಿವೆ ಎಂದರು.
ಕ್ಷೇತ್ರ ಪುನರ್ ವಿಂಗಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡುವ ನಿರೀಕ್ಷೆ ಇತ್ತು. ಆ ರೀತಿ ಅವರು ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದಂತೆ ಸರ್ವಪಕ್ಷ ಸಭೆ ಕರೆದು ಚರ್ಚೆ ಮಾಡಬೇಕಿತ್ತು ಎಂದರು.
ದೆಹಲಿಯಲ್ಲಿ ನಾಳೆ ನಾನು, ಕೇರಳ ಮತ್ತು ತೆಂಲಗಾಣ ಮುಖ್ಯಮಂತ್ರಿಗಳು ಚರ್ಚೆ ಮಾಡುತ್ತಿದ್ದು, ನಮ್ಮ ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯದ ಬಗ್ಗೆಯೂ ಮಾತನಾಡುತ್ತೇವೆ. ಉತ್ತರ ಭಾರತದ ರಾಜ್ಯಗಳಲ್ಲಿ ಎಷ್ಟು ಸ್ಥಾನಗಳು ಹೆಚ್ಚಾಗಲಿವೆ. ದಕ್ಷಿಣ ಭಾರತದ ರಾಜ್ಯಗಳ ಪರಿಸ್ಥಿತಿ, ಸಾಧಕ-ಬಾಧಕ ಎಲ್ಲದರ ಬಗ್ಗೆಯೂ ಚರ್ಚಿಸುತ್ತೇವೆ ಎಂದರು.
ಕ್ಷೇತ್ರ ಪುನರ್ ವಿಂಗಡಣೆ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟ ತೀರ್ಮಾನ ಮಾಡಿದೆ. ಈ ಮಾಹಿತಿ ನಮಗೆ ಮಾಧ್ಯಮಗಳ ಮೂಲಕ ತಿಳಿದಿದೆ. ಹೆಚ್ಚಿನ ವಿವರಗಳು ಇಲ್ಲ. ಏನೆ ಇರಲಿ ನಾವು ನಮ್ಮ ಹಿತರಕ್ಷಣೆಗೆ ಹೋರಾಟ ಮಾಡುತ್ತೇವೆ ಎಂದರು.
ಬಿಜೆಪಿಯವರು ತಮ್ಮ ಅನುಕೂಲಕ್ಕೆ ತಕ್ಕಂತೆ ಎಲ್ಲವನ್ನು ಮಾಡುತ್ತಿದ್ದಾರೆ. ನಾವು ನಮ್ಮ ಸಾರ್ವಭೌಮತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಮಹಿಳಾ ಮೀಸಲಾತಿಗೆ ನಮ್ಮ ಬೆಂಬಲವಿದೆ. ಆದರೆ, ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ನಮ್ಮ ಬೆಂಬಲ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕನ್ನಡಿಗರ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಮಸೂದೆಗೆ ಬೆಂಬಲ ನೀಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಆಡಳಿತದಲ್ಲಿದ್ದಾಗ ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂಬುದನ್ನು ಅವರು ಹೇಳಲಿ. ಖಾಲಿ ಮಾತು ಆಡುವುದಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಬರ ಪರಿಹಾರ ಸಿಗದಿದ್ದರೆ ದೆಹಲಿ ಚಲೋ
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಕೇಂದ್ರ ಸರ್ಕಾರ ಈವರೆಗೂ ಒಂದು ರೂಪಾಯಿ ನೆರವು ನೀಡಿಲ್ಲ. ವಿಧಾನಮಂಡಲದ ಬೆಳಗಾವಿ ಅಧಿವೇಶನದವರೆಗೂ ಕಾಯುತ್ತೇವೆ. ಪರಿಹಾರ ನೀಡದಿದ್ದರೆ ಅಧಿವೇಶನ ನಂತರ ದೆಹಲಿ ಚಲೋ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸಚಿವ ಸಂಪುಟದಲ್ಲೂ ನಾವು ಈ ವಿಚಾರವಾಗಿ ಚರ್ಚಿಸಿದ್ದೇವೆ. ದೆಹಲಿ ಚಲೋ ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ಆಗಿದೆ ಎಂದರು.
ಕೇಂದ್ರ ಸರ್ಕಾರ ಬರ ಪರಿಹಾರ ನೀಡದಿದ್ದರೆ ಸುಪ್ರೀಂಕೋರ್ಟ್ ಮೇಟ್ಟಿಲೇರುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ಗೂ ಹೋಗುತ್ತೇವೆ. ನಮಗೆ ಬರ ಪರಿಹಾರ ಸಿಗುವವರೆಗೂ ಎಲ್ಲ ರೀತಿಯ ಹೋರಾಟ ನಡೆಸುತ್ತೇವೆ ಎಂದರು.
ಬರ ಪರಿಹಾರ ಸಂಬಂಧ ಸರ್ವಪಕ್ಷ ನಿಯೋಗದ ಭೇಟಿಗೆ ಸಮಯ ಕೊಡಿ ಎಂದು ಪ್ರಧಾನಿಗಳಿಗೂ ಮನವಿ ಮಾಡಿದ್ದೇವೆ. ಬೆಂಗಳೂರಿಗೆ ಮೋದಿ ಅವರು ಬಂದಿದ್ದಾಗ ಈ ವಿಚಾರವನ್ನು ಸಾರ್ವಜನಿಕವಾಗಿಯೇ ಪ್ರಸ್ತಾಪಿಸಿದ್ದೇನೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಕನ್ನಡ ಧ್ವಜಕ್ಕೆ ಮಾನ್ಯತೆ ನೀಡುವ ವಿಚಾರದಲ್ಲೂ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಮೀಸಲಾತಿ ಹೆಚ್ಚಳವನ್ನು ಸಂವಿಧಾನದ ೯ನೇ ಅನುಸೂಚಿಯಲ್ಲಿ ಸೇರಿಸಬೇಕು ಎಂಬ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.
ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಾನು ಅಧಿಕಾರಿಗಳೊಂದಿಗೂ ಚರ್ಚಿಸಿದ್ದೇನೆ. ನಮ್ಮ ಸಚಿವರು ಆಶಾ ಕಾರ್ಯಕರ್ತರೆಯರೊಂದಿಗೆ ಮಾತುಕತೆ ನಡೆಸುವರು. ಎನ್ಡಿಎ ನಾಯಕರು ಆಶಾ ಕಾರ್ಯಕರ್ತೆಯರನ್ನು ಸರ್ಕಾರದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ ಅವರು, ಕೇಂದ್ರದಿಂದ ಆಶಾ ಕಾರ್ಯಕರ್ತೆಯರಿಗೆ ನೆರವು ಕೊಡಿಸುವ ಕೆಲಸವನ್ನು ಎನ್ಡಿಎ ನಾಯಕರು ಮಾಡುತ್ತಿಲ್ಲ ಎಂದು ಕಿಡಿಕಾರಿದರು.
ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಕೆ ವಿಚಾರದಲ್ಲಿ ನಮಗೆ ಎಷ್ಟು ಜವಾಬ್ದಾರಿ ಇದೆಯೇ ಅಷ್ಟೇ ಕೇಂದ್ರಕ್ಕೂ ಇದೆ. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ೨ ಸಾವಿರ ಕೊಟ್ಟಿರವುದನ್ನು ಬಿಟ್ಟರೆ ಬೇರೆನೂ ನೀಡುತ್ತಿಲ್ಲ ಎಂದರು
ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಆಶಾ ಕಾರ್ಯಕರ್ತರೆಯರಿಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.






















