
ಬೀದರ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಮೈಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ (ಊSWಅ-೨೬೦೩)ವನ್ನು ಘೋಡಂಪಳ್ಳಿಗೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.
ಘೋಡಂಪಳ್ಳಿ ಗ್ರಾಮವು ಬೀದರ್ ನಗರದಿಂದ ಸುಮಾರು ೧೫ ಕಿಲೋಮೀಟರ್ ದೂರದಲ್ಲಿದ್ದು, ಸಮರ್ಪಕ ಸಾರಿಗೆ ಸಂಪರ್ಕವಿಲ್ಲದ ನಿರ್ಜನ ಪ್ರದೇಶವಾಗಿದೆ. ಅಲ್ಲದೆ, ತೆಲಂಗಾಣ ಗಡಿಭಾಗ, ಅರಣ್ಯ ಪ್ರದೇಶ ಹಾಗೂ ಸ್ಮಶಾನದ ಸಮೀಪ ಇರುವುದರಿಂದ ವಿದ್ಯಾರ್ಥಿನಿಯರ ಸುರಕ್ಷತೆ ದೃಷ್ಟಿಯಿಂದ ವಸತಿ ನಿಲಯ ಸ್ಥಳಾಂತರ ಸೂಕ್ತವಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಘೋಡಂಪಳ್ಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬಾಲಕಿಯರ ವಸತಿ ನಿಲಯವನ್ನು ಅಲ್ಲಿಗೆ ಸ್ಥಳಾಂತರಿಸುವುದು ವಿದ್ಯಾರ್ಥಿನಿಯರ ಶಿಕ್ಷಣ ಹಾಗೂ ಭದ್ರತೆಗೆ ಧಕ್ಕೆಯಾಗಲಿದೆ ಎಂದು ಸಂಘಟನೆಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಲೋಕಸಭಾ ಸದಸ್ಯರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಜನಸ್ಪಂದನ ಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಲಾಗಿತ್ತು.
ಇದೇ ವೇಳೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಘೋಡಂಪಳ್ಳಿಯ ನಿಗದಿತ ಕಟ್ಟಡಕ್ಕೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಬಾಲಕಿಯರ ವಸತಿ ನಿಲಯ ನಡೆಸಲು ಆ ಸ್ಥಳ ಸೂಕ್ತವಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಸ್ತುತ, ಆಯುಕ್ತರ ಮುಂದಿನ ನಿರ್ದೇಶನದವರೆಗೆ ಮೈಲೂರು ವಸತಿ ನಿಲಯವನ್ನು ಸ್ಥಳಾಂತರಿಸುವ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಚಾಲಕರಾದ ಧನರಾಜ ಮುಸ್ತಾಪೂರ, ಜಿಲ್ಲಾ ಸಹ ಸಂಚಾಲಲಕ ವಿಜಯಕುಮಾರ ಐಹೊಳೆ, ಜೈಪ್ರಕಾಶ ಅಷ್ಟೂರೆ, ಹಾಗೂ ಸಮಾಜ ಸೇವಕ ಬಸವರಾಜ ಭಾವಿದೊಡ್ಡಿ ಅವರು ವಿದ್ಯಾರ್ಥಿನಿಯರ ಹಿತದೃಷ್ಟಿಯಿಂದ ಮೈಲೂರು ವಸತಿ ನಿಲಯವನ್ನು ಬೀದರ್ ನಗರದಲ್ಲಿಯೇ ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.































