
ತುಮಕೂರು, ಅ. ೨೬- ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಬಸವರಾಜ್ ಕನ್ನಾಳೆ ಅವರನ್ನು ತುಮಕೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಕನ್ನಾಳೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿಂದೆ ಹಲವು ಬಾರಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿತ್ತು. ಯಾವುದಕ್ಕೂ ಅವರಿಂದ ಉತ್ತರ ಬಂದಿಲ್ಲ. ಹೀಗಾಗಿ ರಾಜ್ಯ ವಿಶ್ವವಿದ್ಯಾಲಯದ ಕಾಯ್ದೆ ಅನ್ವಯ ಅವರ ಸಿಂಡಿಕೇಟ್ ಸದಸ್ಯ ಸ್ಥಾನದ ನಾಮ ನಿರ್ದೇಶನವನ್ನು ಹಿಂಪಡೆಯಲಾಗಿದೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.
ಕನ್ನಾಳೆಯಿಂದ ತೆರವಾದ ಸ್ಥಾನಕ್ಕೆ ಬೆಂಗಳೂರಿನ ಕೆ.ವಿ.ಸಂದೀಪ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಉಳಿದ ಅಧಿಕಾರಾವಧಿಗೆ ಇದು ಅನ್ವಯಿಸಲಿದೆ. ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ ತೆರವುಗೊಂಡ ದಿನದಿಂದ ಇದು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.





















