
ರೋಣ,ಸೆ೫ : ಗ್ರಾಮೀಣ ಭಾಗದ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ತಯಾರಿಸುವ ವಿವಿಧ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ರೋಣ ತಾಲೂಕಿನ ಸವಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಾಸಿಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೦೬ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು ಸಂತೆಯಲ್ಲಿ ಭಾಗವಹಿಸಿ, ತಾವು ತಯಾರಿಸಿದ ವಿವಿಧ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಸಾಂಪ್ರದಾಯಿಕ ಖಾದ್ಯಗಳು, ಕರಕುಶಲ ವಸ್ತುಗಳು ಸೇರಿದಂತೆ ವಿವಿಧ ಉತ್ಪನ್ನಗಳು ಗ್ರಾಹಕರ ಗಮನ ಸೆಳೆದವು.
ಮಾಸಿಕ ಸಂತೆಯನ್ನು ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ. ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಗುಣಮಟ್ಟದ ಉತ್ಪನ್ನಗಳಿಗೆ ಸ್ಥಳೀಯವಾಗಿಯೇ ಮಾರುಕಟ್ಟೆ ದೊರಕಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಸಂತೆಯ ಮೂಲಕ ಉತ್ಪಾದಕರು ಹಾಗೂ ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸುವಂತಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವನಗೌಡ ಮೆಣಸಗಿ, ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು, ತಾಲೂಕಿನ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು, ಸಂಜೀವಿನಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸೇರಿದಂತೆ ಹಲವರು ಉಪಸ್ಥಿತರಿದ್ದರು.






























