
ಮಾಲೂರು, ನ. ೨೦-ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಶ್ರಮಿಸಿರುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ಅವರಿಗೆ ರಾಜಕೀಯವಾಗಿ ಅವಕಾಶ ಕಲ್ಪಿಸುವುದೇ ಪಕ್ಷದ ಮುಖ್ಯ ಉದ್ದೇಶ ಎಂದು ಶಾಸಕ ಕೆ.ವೈ. ನಂಜೇಗೌಡ ಹೇಳಿದರು. ಟೇಕಲ್ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಚುನಾವಣಾಆಕಾಂಕ್ಷಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಕರೆ ನೀಡಿದರು.
ಸಭೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಟೇಕಲ್ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ನಂಜೇಗೌಡ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು. ಜೊತೆಗೆ ಬನಹಳ್ಳಿ ಹಾಗೂ ಕೆ.ಜಿ.ಹಳ್ಳಿ ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಆಕಾಂಕ್ಷಿಗಳನ್ನು ಗುರುತಿಸಲಾಗಿದ್ದು, ನೊಟುವೆ ಹಾಗೂ ಟೇಕಲ್ ತಾಲೂಕು ಪಂಚಾಯಿತಿ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
೧೯೮೬ರಿಂದ ಕಾಂಗ್ರೆಸ್ ಪಕ್ಷದೊಂದಿಗೆ ನಂಟು ಹೊಂದಿರುವುದಾಗಿ ಹೇಳಿದ ನಂಜೇಗೌಡ, ಪಕ್ಷಕ್ಕೆ ನಿಷ್ಠರಾಗಿರುವವರು ಮತ್ತು ಸಂಘಟನೆಗಾಗಿ ದುಡಿಯುವವರಿಗೆ ಆದ್ಯತೆ ನೀಡುವುದು ತಮ್ಮ ರಾಜಕೀಯ ಧ್ಯೇಯವಾಗಿದೆ ಎಂದು ಹೇಳಿದರು. ಪ್ರತಿ ಗ್ರಾಮ, ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವ ಮೂಲಕ ಚುನಾವಣೆಗೆ ಸಜ್ಜಾಗಬೇಕು ಎಂದರು.
ಪಕ್ಷದ ಹೆಸರಿನಲ್ಲಿ ಗುರುತಿಸಿಕೊಂಡು, ಚುನಾವಣೆ ಸಮಯದಲ್ಲಿ ವಿರೋಧ ಪಕ್ಷಗಳೊಂದಿಗೆ ಸಂಪರ್ಕ ಇಟ್ಟುಕೊಳ್ಳುವವರ ಬಗ್ಗೆ ಎಚ್ಚರಿಕೆ ನೀಡಿದ ಅವರು, ಪಕ್ಷಕ್ಕೆ ದ್ರೋಹ ಮಾಡುವವರನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ಅವರಿಗೆ ರಾಜಕೀಯ ಅವಕಾಶ ಕಲ್ಪಿಸುವ ಕುರಿತು ಮುಖಂಡರು ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಮಾಲೂರು ಕ್ಷೇತ್ರದಲ್ಲಿ ಕಳೆದ ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಫಲವಾಗಿ ಹಲವಾರು ಪ್ರದೇಶಗಳಲ್ಲಿ ಕಾಂಗ್ರೆಸ್ ಪರ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಯಾರಿಗೂ ವೈಯಕ್ತಿಕ ತೊಂದರೆ ನೀಡಿಲ್ಲವೆಂದು ತಿಳಿಸಿದ ಅವರು, ಅಭಿವೃದ್ಧಿ ಹಾಗೂ ಜನಪರ ಆಡಳಿತದ ಮೂಲಕ ಜನರ ವಿಶ್ವಾಸ ಗಳಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.
೨೦೧೮ ಮತ್ತು ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಒಗ್ಗಟ್ಟಿನ ಫಲವಾಗಿ ಗೆಲುವು ಸಾಧಿಸಲಾಗಿದೆ ಎಂದು ಸ್ಮರಿಸಿದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಕ್ಷೇತ್ರದಲ್ಲಿ ಕಾಂಗ್ರೆಸ್ ಮತಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ಸಾಧ್ಯವಾಗಿದೆ ಎಂದು ಹೇಳಿದರು. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾಲೂರು ಕ್ಷೇತ್ರದ ಐದು ಜಿಲ್ಲಾ ಪಂಚಾಯಿತಿ ಮತ್ತು ೨೦ ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಮತ್ತು ಗೆಲುವಿನ ಸಾಧ್ಯತೆಯನ್ನು ಪ್ರಮುಖ ಮಾನದಂಡವನ್ನಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಂಜೇಗೌಡ, ತಮ್ಮ ಕುಟುಂಬದಲ್ಲಿಯೂ ರಾಜಕೀಯ ಅವಕಾಶಗಳ ಕುರಿತು ಚರ್ಚೆ ನಡೆದಿದ್ದು, ಕುಟುಂಬದವರಿಗಿಂತ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಅವಕಾಶ ನೀಡಬೇಕು ಎಂಬ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದರು. ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರ ಒಮ್ಮತದ ಅಭಿಪ್ರಾಯದಂತೆ ಸುನಿಲ್ ನಂಜೇಗೌಡರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ಪಕ್ಷನಿಷ್ಠೆಯ ಪ್ರತೀಕವಾಗಿದೆ ಎಂದು ಶ್ಲಾಘಿಸಿದರು.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ, ಯೋಜನಾ ಆಯೋಗದ ಅಧ್ಯಕ್ಷ ವಿಜಯ ನರಸಿಂಹ, ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ರಾಮಮೂರ್ತಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಹನುಮಂತಪ್ಪ, ಎಚ್.ವಿ. ಚಂದ್ರಶೇಖರಗೌಡ, ಕೆ.ಎಸ್. ವೆಂಕಟೇಶ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೇಮಮಾಲಿನಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ವಿನೋದ್ ಗೌಡ ಸೇರಿದಂತೆ ಹಲವು ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
























