
ಯಾದಗಿರಿ:ಜೂ.೩೦: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರನ್ನಾಗಿ ಪಕ್ಷದ ಹಿರಿಯ ಮುಖಂಡ ಪರಶುರಾಮ ಚವ್ಹಾಣ್ (ಚಾಮನಳ್ಳಿ ತಾಂಡಾ) ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮರೆಪ್ಪ ಬಿಳ್ಹಾರ ಅವರು ಆದೇಶ ಹೊರಡಿಸಿದ್ದು, ಪಕ್ಷದ ಸಂಘಟನೆ ಹಾಗೂ ಜನಪರ ಕಾರ್ಯಗಳನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ಪರಶುರಾಮ ಚವ್ಹಾಣ್ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಅನಪುರ ಅವರ ಸೂಚನೆ ಮೇರೆಗೆ ಈ ನೇಮಕಾತಿ ಆದೇಶ ಪ್ರಕಟಿಸಲಾಗಿದೆ.
ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳು ಹಾಗೂ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಜೊತೆಗೆ, ಜಿಲ್ಲೆಯಾದ್ಯಂತ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ನೇಮಕಾತಿ ಕುರಿತು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ, ಪರಶುರಾಮ ಚವ್ಹಾಣ್ ಅವರ ನೇತೃತ್ವದಲ್ಲಿ ಪ್ರಚಾರ ಸಮಿತಿ ಮತ್ತಷ್ಟು ಚುರುಕಾಗಿ ಕಾರ್ಯನಿರ್ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





























