
ಬೀದರ್:ಮಾ.17: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಕಾಮಗಾರಿಗಳ ಬಾಕಿ ಬಿಲ್ಲುಗಳನ್ನು ಶೀಘ್ರ ಪಾವತಿಸಲು ಕ್ರಮ ಕೈಗೊಳ್ಳುವಂತೆ ಬೀದರ್ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘ ವತಿಯಿಂದ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆದಾರರು ವಿವಿಧ ಯೋಜನೆಗಳಡಿ ಕಾಮಗಾರಿಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ಸುಮಾರು ಒಂದು ವರ್ಷ ಕಳೆದಿದ್ದರೂ ಸಹ ಸಂಬಂಧಿಸಿದ ಬಿಲ್ಲುಗಳು ಇನ್ನೂ ಪಾವತಿಯಾಗಿಲ್ಲ, ಸಣ್ಣ ಗುತ್ತಿಗೆದಾರರು ಸಾಲ ಪಡೆದು ಕಾಮಗಾರಿಗಳನ್ನು ಪೂರ್ಣಗೊಳಿಸಿರುವುದರಿಂದ ಬಿಲ್ಲು ಪಾವತಿಯಲ್ಲಿ ವಿಳಂಬವಾಗುತ್ತಿರುವುದು ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ.
ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ ಎಂದು ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಆದ್ದರಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಶಿಫಾರಸು ಮಾಡಿ ಗುತ್ತಿಗೆದಾರರ ಕಾಮಗಾರಿಗಳ ಬಾಕಿ ಬಿಲ್ಲುಗಳನ್ನು ತಕ್ಷಣ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಬುದ್ಧ ಪ್ರಕಾಶ ಭಾವಿಕಟ್ಟಿ, ಪ್ರಧಾನ ಕಾರ್ಯದರ್ಶಿ ಮೊಹ್ಮದ್ ಅನ್ವರ್, ಗೌರವಾಧ್ಯಕ್ಷರಾದ ಶಿವಾನಂದ ಕೆ. ಪಾಟೀಲ್ ಮತ್ತು ಖಾಜಾ ಶೇಖ್ ಸಲೀಮ್,ಮಹದೇವ ಸ್ವಾಮಿ, ಮಹೇಶ ಚಿಂತಾಮಣಿ, ಕಾನೂನು ಸಲಹೆಗಾರ ಎಂಡಿ ಲೈಕ್ ಇಮ್ರಾನ್ (ವಕೀಲರು), ಮತ್ತು ಸಹ ಕಾರ್ಯದರ್ಶಿ ಅಬ್ದುಲ್ ಹಮೀದ್, ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.






















