
ಬೆಂಗಳೂರು,ಜೂ.೧೯: ರಾಜಧಾನಿಯಲ್ಲಿ ಬಿಎಂಟಿಸಿ ಬಸ್‌ಗಳ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗೆ ಮತ್ತೊಂದು ಜೀವ ಬಲಿಯಾಗಿದೆ. ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರ ಮೇಲೆ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹರಿದ ಪರಿಣಾಮ, ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗನಹಳ್ಳಿ ನಿವಾಸಿ, ಗಾರೆ ಕೆಲಸಗಾರ ರಾಜು (೫೮) ಮೃತಪಟ್ಟ ದುರ್ದೈವಿ. ನಿನ್ನೆ) ಜ್ಞಾನಭಾರತಿಯ ಮಂಗನಹಳ್ಳಿ ಕ್ರಾಸ್ ಬಳಿ ರಾಜು ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತಿವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ರಾಜು ಅವರ ಮೇಲೆ ಹರಿದಿದೆ. ಅಪಘಾತದ ತೀವ್ರತೆಗೆ ತೀವ್ರ ರಕ್ತಸ್ರಾವವಾಗಿ ರಾಜು ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಬಿಎಂಟಿಸಿ ಚಾಲಕರ ಬೇಜವಾಬ್ದಾರಿತನದ ಚಾಲನೆಯೇ ಈ ಘಟನೆಗೆ ಕಾರಣ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಜ್ಞಾನಭಾರತಿ ಸಂಚಾರ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯ ಪೊಲೀಸರು ಅಪಘಾತ ಎಸಗಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸನ್ನು ವಶಕ್ಕೆ ಪಡೆದಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

























