Home ಜಿಲ್ಲೆ ಬೆಂಗಳೂರು ಕೆಜಿಎಫ್ ನಗರದಲ್ಲಿ ಕಸದ ರಾಶಿ: ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಕೆಜಿಎಫ್ ನಗರದಲ್ಲಿ ಕಸದ ರಾಶಿ: ಅಧಿಕಾರಿಗಳ ವಿರುದ್ಧ ಜನಾಕ್ರೋಶ

ಕೆಜಿಎಫ್,ಅ.೫: ನಗರದ ಬಹುತೇಕ ಪ್ರಮುಖ ಸ್ಥಳಗಳಲ್ಲಿ ಕಸದ ರಾಶಿಗಳು ದಿನದಿಂದ ದಿನಕ್ಕೆ ಬೆಟ್ಟದಂತೆ ಬೆಳೆಯುತ್ತಿದ್ದರೂ ನಗರಸಭೆ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.
ನಗರದ ವಿವಿಧ ಬಡಾವಣೆಗಳು, ಪ್ರಮುಖ ರಸ್ತೆಗಳು ಹಾಗೂ ವ್ಯಾಪಾರ ಪ್ರದೇಶಗಳಲ್ಲಿ ಕಸ ಎಲ್ಲೆಂದರಲ್ಲಿ ರಾಶಿ ಬಿದ್ದಿದ್ದು,ಕಸವನ್ನು ನಿಯಮಿತವಾಗಿ ತೆರವುಗೊಳಿಸದೆ ಇರುವುದರಿಂದ ಸಾರ್ವಜನಿಕರು ದುರ್ವಾಸನೆ, ಸೊಳ್ಳೆಗಳ ಕಾಟ ಹಾಗೂ ಅನೈರ್ಮಲ್ಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಕಸ ವಿಲೇವಾರಿ ನಗರಸಭೆಯ ಪ್ರಮುಖ ಜವಾಬ್ದಾರಿಯಾಗಿದ್ದರೂ, ನಗರದ ಪರಿಸ್ಥಿತಿ ನೋಡಿದರೆ ಕಸ ವಿಲೇವಾರಿ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಅನುಮಾನ ಮೂಡುತ್ತಿದೆ.ನಗರಸಭೆಯಲ್ಲಿ ಸಾಕಷ್ಟು ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಇದ್ದರೂ, ಪ್ರಮುಖ ಸ್ಥಳಗಳಲ್ಲಿ ಕಸದ ರಾಶಿಗಳು ಏಕೆ ಕಾಣಿಸಿಕೊಳ್ಳುತ್ತಿವೆ ಎಂಬುದಕ್ಕೆ ಅಧಿಕಾರಿಗಳು ಉತ್ತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


ನಗರದಲ್ಲಿ ಎಲ್ಲೆಂದರಲ್ಲಿ ಬಿದ್ದಿರುವ ಕಸದ ರಾಶಿಗಳಿಂದ ಸೊಳ್ಳೆಗಳ ಉತ್ಪತ್ತಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗುತ್ತಿದೆ. ಸೊಳ್ಳೆಗಳ ಕಾಟ ಹೆಚ್ಚಾಗಿರುವುದರಿಂದ ಮನೆಗಳಲ್ಲಿ ಮಕ್ಕಳು, ವೃದ್ಧರು ಸೇರಿದಂತೆ ಕುಟುಂಬ ಸದಸ್ಯರನ್ನು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಜನರು ಪರದಾಡುವಂತಾಗಿದೆ.


ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ವಿಷಯವಾಗಿರುವುದರಿಂದ ನಗರಸಭೆಯ ಆರೋಗ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಕಸದ ವಿಲೇವಾರಿ, ಸ್ವಚ್ಛತೆ ಹಾಗೂ ಸೊಳ್ಳೆ ನಿಯಂತ್ರಣಕ್ಕೆ ಸಮರ್ಪಕ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. ನಗರಸಭೆಯ ಪೌರಾಯುಕ್ತರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ತಕ್ಷಣ ಗಮನಹರಿಸಿ, ನಗರದಾದ್ಯಂತ ವಿಶೇಷ ಸ್ವಚ್ಛತಾ ಅಭಿಯಾನ ನಡೆಸಬೇಕು. ಕಸದ ರಾಶಿಗಳನ್ನು ತೆರವುಗೊಳಿಸಿ, ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್ ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕರ ಆಕ್ರೋಶ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ನಾಗರಿಕರು ಎಚ್ಚರಿಸಿದ್ದಾರೆ.