
ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಫಲ ತಲುಪಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿರುವ ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿದ್ದು, ದೇಶದ ಸುಭದ್ರತೆಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಅಭಿವೃದ್ಧಿಯತ್ತ ಸಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟರು.
ಪ್ರಧಾನಿ ಮೋದಿ ಅವರ ಕಳೆದ 25 ವರ್ಷಗಳ ಸಾರ್ವಜನಿಕ ಜೀವನವು ದೇಶದ ಸೇವೆ, ಸಮರ್ಪಣೆ ಹಾಗೂ ದೃಢ ಸಂಕಲ್ಪಕ್ಕೆ ಸಾಕ್ಷಿಯಾಗಿದೆ. ಹಿಂದೆ ಭಾರತವನ್ನು ಬಡ ರಾಷ್ಟ್ರವೆಂಬ ದೃಷ್ಟಿಯಿಂದ ನೋಡಲಾಗುತ್ತಿತ್ತು. ಆದರೆ ಇಂದು ಜಾಗತಿಕ ವೇದಿಕೆಯಲ್ಲಿ ಭಾರತ ತನ್ನದೇ ಆದ ಸ್ಥಾನವನ್ನು ರೂಪಿಸಿಕೊಂಡಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ನಾಯಕತ್ವವೂ ಪ್ರಮುಖ ಕಾರಣವಾಗಿದೆ ಎಂದು ಅವರು ತಿಳಿಸಿದರು.
ಗುಜರಾತ್ನಿಂದ ತಮ್ಮ ರಾಜಕೀಯ ಪಯಣ ಆರಂಭಿಸಿ, ನಂತರ ದೇಶದ ಪ್ರಧಾನಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ನರೇಂದ್ರ ಮೋದಿ ಅವರು ವಿಕಸಿತ ಭಾರತ ನಿರ್ಮಾಣದ ಗುರಿಯೊಂದಿಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ. ಅವರ ದೂರದೃಷ್ಟಿ ಹಾಗೂ ಸುದೀರ್ಘ ಸಾರ್ವಜನಿಕ ಸೇವೆ ನವ ಭಾರತದ ನಿರ್ಮಾಣಕ್ಕೆ ಪ್ರೇರಣೆಯಾಗಿದೆ ಎಂದು ರಾಚನಗೌಡ ಮುದ್ನಾಳ ಹೇಳಿದರು.
ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಾರತ ಆರ್ಥಿಕವಾಗಿ ಬಲಿಷ್ಠ ಹಾಗೂ ಸ್ವಾವಲಂಬಿ ರಾಷ್ಟ್ರವಾಗಿ ರೂಪುಗೊಳ್ಳುವ ದಿಸೆಯಲ್ಲಿ ಮುನ್ನಡೆಯುತ್ತಿದೆ. ದೇಶದ ಅಭಿವೃದ್ಧಿ, ಭದ್ರತೆ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಿಸುವ ನಿಟ್ಟಿನಲ್ಲಿ ಅವರ ನಿರಂತರ ಪರಿಶ್ರಮ ಮತ್ತು ಅಚಲ ಸಂಕಲ್ಪ ಗಮನಾರ್ಹವಾಗಿದೆ ಎಂದು ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


















