
ಪಾವಗಡ, ಆ. ೨೨- ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಮಹಾನ್ ನೇತಾರ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ದೇವರಾಜ ಅರಸು ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆಂಪಯ್ಯ ಮಾತನಾಡಿ, ಮೈಸೂರು ರಾಜ್ಯವನ್ನು ’ಕರ್ನಾಟಕ’ ಎಂದು ನಾಮಕರಣ ಮಾಡಿದ್ದು ಸುಲಭದ ಕೆಲಸವಾಗಿರಲಿಲ್ಲ. ಅದೊಂದು ದೊಡ್ಡ ಸವಾಲಾಗಿತ್ತು. ಅಂತಹ ಸವಾಲನ್ನು ಎದುರಿಸಿ ಗೆದ್ದ ಅರಸರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು. ಮುಖ್ಯಮಂತ್ರಿಯಾಗಿ ಅವರು ಜಾರಿಗೆ ತಂದ ಹಲವಾರು ಸಾಮಾಜಿಕ ಹಾಗೂ ಆಡಳಿತಾತ್ಮಕ ಸುಧಾರಣೆಗಳು ಸಮಾಜಕ್ಕೆ ದೊಡ್ಡ ಕೊಡುಗೆಯಾಗಿವೆ. ಅಂತಹ ಆದರ್ಶ ಮುಖ್ಯಮಂತ್ರಿಯ ಜನ್ಮದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.
ದೇವರಾಜ ಅರಸರು ಕೇವಲ ಅಧಿಕಾರ ನಡೆಸಿದವರಲ್ಲ, ಬದಲಿಗೆ ತುಳಿತಕ್ಕೊಳಗಾದವರ ಧ್ವನಿಯಾಗಿ ನಿಂತವರು. ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವಮಾನವನ್ನೇ ಮುಡುಪಾಗಿಟ್ಟರು. ಇಂದಿನ ಯುವ ಪೀಳಿಗೆ ಮತ್ತು ರಾಜಕಾರಣಿಗಳು ಅವರ ತತ್ವ ಸಿದ್ಧಾಂತ ಹಾಗೂ ದೂರದೃಷ್ಟಿಯ ಆಡಳಿತ ವೈಖರಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.
ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳಾದ ವೈ. ರವಿ ಮಾತನಾಡಿ, ಹಿಂದುಳಿದ ವರ್ಗಗಳ ಹರಿಕಾರ ದೇವರಾಜ ಅರಸರು ’ಉಳುವವನೇ ಭೂಮಿಯ ಒಡೆಯ’ ಕಾಯ್ದೆಯಂತಹ ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತಂದರು. ಮಲಹೊರುವ ಪದ್ಧತಿಯನ್ನು ನಿರ್ಮೂಲನೆ ಮಾಡಿದರು ಸರ್ಕಾರವು ಹಿಂದುಳಿದ ವರ್ಗಗಳ ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಗಾಗಿ ದೇವರಾಜ ಅರಸು ಅವರ ಹೆಸರಿನಲ್ಲಿ ಅನೇಕ ಯೋಜನೆಗಳು ಹಾಗೂ ವಸತಿ ನಿಲಯಗಳ ಸೌಲಭ್ಯವನ್ನು ಜಾರಿಗೆ ತಂದಿದೆ. ಇಲಾಖೆಯ ವಸತಿನಿಲಯಗಳಲ್ಲಿ ಉಳಿದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು, ಅರಸರಂತೆ ಸಮಾಜಮುಖಿ ಚಿಂತನೆಗಳನ್ನು ಬೆಳೆಸಿಕೊಂಡು ಉನ್ನತ ಮಟ್ಟಕ್ಕೇರಬೇಕು ಎಂದು ತಿಳಿಸಿದರು
ಲೋಕೇಶ್ ಪಾಳೇಗಾರ್ ಮಾತನಾಡಿ, ಅರಸರು ಮೈಸೂರು ರಾಜ್ಯಕ್ಕೆ ’ಕರ್ನಾಟಕ’ ಎಂದು ಮರುನಾಮಕರಣ ಮಾಡಿದ್ದಷ್ಟೇ ಅಲ್ಲದೆ, ಎಲ್. ಜಿ. ಹಾವನೂರು ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗವನ್ನು ರಚಿಸಿದರು. ಅಲ್ಲದೆ ವಾಲ್ಮೀಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಮೂಲಕ ಸಾಮಾಜಿಕ ನ್ಯಾಯ ಎತ್ತಿ ಹಿಡಿದರು, ಎಲ್.ಜಿ. ಹಾವನೂರು ಆಯೋಗದ ವರದಿ ಜಾರಿಗೆ ತರುವ ಮೂಲಕ ಶೋಷಿತ ಸಮುದಾಯಗಳಿಗೆ ಮೀಸಲಾತಿಯ ಸೌಲಭ್ಯ ಸಿಗುವಂತೆ ಮಾಡಿದ ಕೀರ್ತಿ ಅರಸರಿಗೆ ಸಲ್ಲುತ್ತದೆ.
ವಾಲ್ಮೀಕಿ ಸಮುದಾಯ ಸೇರಿದಂತೆ ಹಲವು ಶೋಷಿತ ವರ್ಗಗಳಿಗೆ ಶೈಕ್ಷಣಿಕ ಮತ್ತು ರಾಜಕೀಯ ಅಸ್ತಿತ್ವ ತಂದುಕೊಟ್ಟ ಮಹಾನ್ ಚೇತನ ಅವರಾಗಿದ್ದಾರೆ. ಇಂದಿನ ಯುವ ಪೀಳಿಗೆಗೆ ದೇವರಾಜ ಅರಸರಂತಹ ಧುರೀಣರ ಆಡಳಿತ ಶೈಲಿ ಮತ್ತು ಸಾಮಾಜಿಕ ಕ್ರಾಂತಿಯ ಅರಿವು ಇರಬೇಕಾದದ್ದು ಅತ್ಯಗತ್ಯ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಉನ್ನತ ಹಂತಕ್ಕೇರುವ ಮೂಲಕ ಅರಸರು ಕಂಡ ಕನಸನ್ನು ನನಸು ಮಾಡಬೇಕು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿ, ಶೈಕ್ಷಣಿಕವಾಗಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಾಲ್ಲೂಕು ಆಡಳಿತದ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಧುಸೂದನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಕುಮಾರ್, ಗೋಪಾಲಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರೇಣುಕಮ್ಮ, ಕಾಳಿದಾಸ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮೈಲಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


































