Home ಜಿಲ್ಲೆ ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳಪೆ ಆಹಾರ ಪತ್ತೆ : ತಪ್ಪಿತಸ್ಥರ ವಿರುದ್ಧ ಕಠಿಣ...

ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಳಪೆ ಆಹಾರ ಪತ್ತೆ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಆಗ್ರಹ

ಬೀದರ್: ಜೂ.22: ಬೀದರ್ ದಕ್ಷಿಣ ಕ್ಷೇತ್ರದ ಕಮಠಾಣಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರ ವ್ಯವಸ್ಥೆ, ಅಡುಗೆಮನೆ ಹಾಗೂ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿದರು.

ಪರಿಶೀಲನೆ ವೇಳೆ ವಿದ್ಯಾರ್ಥಿಗಳಿಗಾಗಿ ಸಂಗ್ರಹಿಸಿಟ್ಟಿದ್ದ ತೊಗರಿಬೇಳೆ, ಅಕ್ಕಿ, ಅಡುಗೆ ಎಣ್ಣೆ, ಶೇಂಗಾ, ಹೆಸರು ಬೇಳೆ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದ್ದಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಚೆಲ್ಲಾಟವಾಡುವಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಘಟನೆಯ ಗಂಭೀರತೆಯನ್ನು ಮನಗಂಡ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ತಕ್ಷಣವೇ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ಕಳಪೆ ಆಹಾರ ಪದಾರ್ಥಗಳ ಕುರಿತು ಸಂಪೂರ್ಣ ಮಾಹಿತಿ ನೀಡಿ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದರು. ಜೊತೆಗೆ, ಈ ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳು, ಸಿಬ್ಬಂದಿ ಅಥವಾ ಗುತ್ತಿಗೆದಾರರು ಯಾರೇ ಆಗಿದ್ದರೂ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರದ ಹಾಗೂ ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ಮಕ್ಕಳ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಲಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ನಿಯಮಿತ ತಪಾಸಣೆ ನಡೆಸಿ, ಯಾವುದೇ ಲೋಪ ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶೀಲನೆಯ ಬಳಿಕ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಅಹವಾಲುಗಳು ಹಾಗೂ ಸಮಸ್ಯೆಗಳನ್ನು ಆಲಿಸಿದರು. ವಿದ್ಯಾರ್ಥಿಗಳು ನೀಡಿದ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿದ ಅವರು, ಮೂಲಭೂತ ಸೌಲಭ್ಯಗಳು, ಆಹಾರದ ಗುಣಮಟ್ಟ ಹಾಗೂ ವಸತಿ ವ್ಯವಸ್ಥೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಪರಿಷ್ಕರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.