Home ಮುಖಪುಟ ಸುದ್ದಿ ತುರ್ತು ಪೆರೋಲ್ ಗೆ ಪ್ರಜ್ವಲ್ ರೇವಣ್ಣ ಅರ್ಜಿ

ತುರ್ತು ಪೆರೋಲ್ ಗೆ ಪ್ರಜ್ವಲ್ ರೇವಣ್ಣ ಅರ್ಜಿ

ಬೆಂಗಳೂರು,ಜು.೧೯- ಚೆನ್ನಮ್ಮ ದೇವೇಗೌಡರ ನಿಧನದ ಬೆನ್ನಲ್ಲೇ ಅವರ ಮೊಮ್ಮಗ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತುರ್ತು ಪೆರೋಲ್ ನೀಡುವಂತೆ ಜೈಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ.


ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಪ್ರಜ್ವಲ್ ರೇವಣ್ಣ, ಅಜ್ಜಿಯ ಅಂತಿಮ ದರ್ಶನ ಪಡೆಯಲು ಹಾಗೂ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ವಿಶೇಷ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.


ಕುಟುಂಬದ ಸದಸ್ಯರ ನಿಧನದಂತಹ ತುರ್ತು ಹಾಗೂ ಮಾನವೀಯ ಸಂದರ್ಭಗಳಲ್ಲಿ ಕೈದಿಗಳಿಗೆ ಪೆರೋಲ್ ನೀಡಲು ಕಾನೂನಿನಲ್ಲಿ ಅವಕಾಶವಿದ್ದು, ಇದೇ ನಿಯಮದಡಿ ಅರ್ಜಿಯನ್ನು ಪರಿಗಣಿಸುವಂತೆ ಮನವಿ ಮಾಡಲಾಗಿದೆ.


ಪ್ರಜ್ವಲ್ ರೇವಣ್ಣ ಅವರ ಅರ್ಜಿಯ ಕುರಿತು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಪರಿಶೀಲನೆ ನಡೆಸಲಿದ್ದು, ಕಾನೂನು ನಿಯಮಗಳು, ಭದ್ರತಾ ವ್ಯವಸ್ಥೆ ಹಾಗೂ ಸಂಬಂಧಿತ ಅಧಿಕಾರಿಗಳ ಅಭಿಪ್ರಾಯಗಳನ್ನು ಆಧರಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಪೆರೋಲ್ ಮಂಜೂರಾದರೆ, ಕಟ್ಟುನಿಟ್ಟಿನ ಪೊಲೀಸ್ ಭದ್ರತೆಯೊಂದಿಗೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆಯುವ ಸಾಧ್ಯತೆಯಿದೆ.


ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ ಅವರು ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.