
ಔರಾದ್:ಜು.25: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ಘಟಕದ ವತಿಯಿಂದ ಜುಲೈ 29ರಂದು (ಬುಧವಾರ) ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ.
ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯಸಾನಿಧ್ಯ ವಹಿಸಲಿದ್ದು, ಶ್ರೀ ದತ್ತ ಸಾಯಿ ಶನೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಶಂಕರಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಔರಾದ್ ಶಾಸಕ ಪ್ರಭು ಚವ್ಹಾಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಲಬುರಗಿ ಸ್ಥಾನಿಕ ಸಂಪಾದಕ ಬಾಬುರಾವ ಯಾಡ್ರಾಮಿ ಮುಖ್ಯ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ, ತಹಶೀಲ್ದಾರ್ ಮಹೇಶ ಪಾಟೀಲ್, ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ತಾಪಂ ಇಒ ಕಿರಣ ಪಾಟೀಲ ಹಾಗೂ ಸಹಾಯಕ ನಿರ್ದೇಶಕ ಶಿವಕುಮಾರ ಫಾಟೆ ಭಾಗವಹಿಸಲಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಮನ್ಮಥ ಸ್ವಾಮಿ ಆಶಯ ನುಡಿಗಳನ್ನಾಡಲಿದ್ದಾರೆ. ರಿಯಾಜ್ ಪಾಶಾ ಕಾರ್ಯಕ್ರಮ ನಿರೂಪಿಸಲಿದ್ದು, ಮಲ್ಲಪ್ಪ ಗೌಡಾ ಸ್ವಾಗತಿಸುವರು, ಅಮರ ಸ್ವಾಮಿ ವಂದಿಸಲಿದ್ದಾರೆ.
ಪತ್ರಕರ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.































