
ನವದೆಹಲಿ, ನ.೧೫-ಹಿಂದಿನ ಸರ್ಕಾರಗಳಿಗೆ ಬುಡಕಟ್ಟು ಸಮುದಾಯಗಳ ಸಮಸ್ಯೆಗಳ ಬಗ್ಗೆ ಸರಿಯಾದ ಅರಿವೂ ಇರಲಿಲ್ಲ, ಅವರ ಅಭಿವೃದ್ಧಿಯ ಬಗ್ಗೆ ಕಾಳಜಿಯೂ ಇರಲಿಲ್ಲ ಎಂದು ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಇಂದು ಆಯೋಜಿಸಲಾಗಿದ್ದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಬುಡಕಟ್ಟು ಸಮುದಾಯದ ಜನರೊಂದಿಗೆ ಸಂವಾದ ನಡೆಸಿದ ಅವರು, ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ವಿವರಿಸಿದರು.
ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಭಗವಾನ್ ಬಿರ್ಸಾ ಮುಂಡಾ ಅವರ ೧೫೧ನೇ ಜನ್ಮ ಜಯಂತಿಯ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇಶದ ವಿವಿಧ ಭಾಗಗಳ ಬುಡಕಟ್ಟು ಸಮುದಾಯದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಸರ್ಕಾರಿ ಯೋಜನೆಗಳಿಂದ ತಮ್ಮ ಬದುಕಿನಲ್ಲಿ ಆಗಿರುವ ಬದಲಾವಣೆಗಳ ಕುರಿತು ಪ್ರಧಾನಿಯವರೊಂದಿಗೆ ಅನುಭವ ಹಂಚಿಕೊಂಡರು.
ಹಿಂದೆ ಮಳೆಗಾಲದಲ್ಲಿ ತಮ್ಮ ಕುಟುಂಬ ವಾಸಿಸುತ್ತಿದ್ದ ಮನೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಕೀಟಗಳು ಮತ್ತು ಕ್ರಿಮಿಕೀಟಗಳ ಕಾಟದಿಂದ ಜೀವನ ನಡೆಸುವುದು ಕಷ್ಟವಾಗಿತ್ತು. ಆದರೆ ಪಿಎಂ-ಜನ್ಮನ್ ಯೋಜನೆಯಡಿ ತಮ್ಮ ಕುಟುಂಬಕ್ಕೆ ಪಕ್ಕಾ ಮನೆ, ಶೌಚಾಲಯ ಸೇರಿದಂತೆ ಅಗತ್ಯ ಸೌಲಭ್ಯಗಳು ದೊರೆತಿವೆ ಎಂದು ತಿಳಿಸಿದರು.
ಇದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಬುಡಕಟ್ಟು ಕುಟುಂಬಗಳ ಜೀವನದಲ್ಲಿ ಪಿಎಂ-ಜನ್ಮನ್ ಯೋಜನೆ ಮಹತ್ವದ ಬದಲಾವಣೆ ತರುತ್ತಿದೆ ಎಂದರು.
ಗ್ರಾಮೀಣ ಪ್ರದೇಶಗಳಿಗೆ ಅಭಿವೃದ್ಧಿಯ ಸೌಲಭ್ಯಗಳು ತಲುಪುವುದರ ಜೊತೆಗೆ ಬುಡಕಟ್ಟು ಸಮುದಾಯಗಳು ತಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಪರಂಪರೆಯೊಂದಿಗಿನ ನಂಟನ್ನು ಉಳಿಸಿಕೊಳ್ಳುವುದು ಕೂಡ ಅಷ್ಟೇ ಮುಖ್ಯ ಎಂದು ಹೇಳಿದರು.
























