Home ಜಿಲ್ಲೆ ಕುಡಿಯುವ ನೀರಿಗೆ ಆದ್ಯತೆ ನೀಡಿ; ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಲಿ

ಕುಡಿಯುವ ನೀರಿಗೆ ಆದ್ಯತೆ ನೀಡಿ; ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಲಿ

ಯಾದಗಿರಿ: ಆ.೬:ಮಳೆಗಾಲದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವ ಜತೆಗೆ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದAತೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲೇ ಇದ್ದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ತಕ್ಷಣ ಕಂದಾಯ ಇಲಾಖೆಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕುಡಿಯುವ ನೀರಿನ ನಿರ್ವಹಣೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ತಲಾ ಒಬ್ಬ ನೊಡಲ್ ಅಧಿಕಾರಿಯನ್ನು ನೇಮಿಸಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಗ್ರಾಮ ಪಂಚಾಯಿತಿ ಕೇಂದ್ರದಲ್ಲಿಯೇ ಕಾರ್ಯನಿರ್ವಹಿಸಬೇಕು. ಜನರಿಗೆ ಅಧಿಕಾರಿಗಳು ಸುಲಭವಾಗಿ ಲಭ್ಯವಾಗಬೇಕು ಎಂದು ಸಚಿವರು ಹೇಳಿದರು.

ಶಾಸಕ ಶರಣಗೌಡ ಕಂದಕೂರ ಅವರು ಪಿಡಿಒಗಳು ಕೇಂದ್ರ ಸ್ಥಾನದಲ್ಲಿರುವುದಿಲ್ಲ ಎಂಬ ವಿಷಯ ಪ್ರಸ್ತಾಪಿಸಿದ ವೇಳೆ, ಬೆಳಗ್ಗೆಯಿಂದ ಸಂಜೆವರೆಗೆ ನಾಲ್ಕು ಬಾರಿ ಹಾಜರಾತಿ ದಾಖಲಿಸುವ ವ್ಯವಸ್ಥೆ ಜಾರಿಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಚಿವರು ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ರೀತಿಯ ತೊಂದರೆ ಉಂಟಾಗದAತೆ ತಹಸೀಲ್ದಾರರು ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ನಿರಂತರವಾಗಿ ನಿಗಾ ವಹಿಸಬೇಕು. ಜಲ ಜೀವನ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಶಾಸಕರಾದ ಶರಣಬಸಪ್ಪ ದರ್ಶನಾಪುರ, ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಶರಣಗೌಡ ಕಂದಕೂರ ಹಾಗೂ ರಾಜಾ ವೇಣುಗೋಪಾಲ ನಾಯಕ್ ಅವರು ವಿದ್ಯುತ್ ಕೊರತೆ, ಟ್ರಾನ್ಸ್ಫಾರ್ಮರ್ ಅಳವಡಿಕೆ ಮತ್ತು ದುರಸ್ತಿ ಸಮಸ್ಯೆಗಳನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜೆಸ್ಕಾಂ ಅಧಿಕಾರಿಗಳು ೨೪ ಗಂಟೆಗಳೊಳಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುಖ್ಯಮಂತ್ರಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ?೧ ಕೋಟಿ ಅನುದಾನ ನೀಡಿರುವುದನ್ನು ಉಲ್ಲೇಖಿಸಿದ ಸಚಿವರು, ಅಗತ್ಯವಿರುವ ಕಡೆ ಬೋರ್‌ವೆಲ್, ಆರ್‌ಒ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳ ಅಂದಾಜು ವೆಚ್ಚದ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಿ ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರ್ಡಿಯಾ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ಶರಣಬಸಪ್ಪ ದರ್ಶನಾಪುರ, ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಶರಣಗೌಡ ಕಂದಕೂರ, ರಾಜಾ ವೇಣುಗೋಪಾಲ ನಾಯಕ್, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.