
ಸಂಜೆವಾಣಿ ವಾರ್ತೆ
ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ರೈತರು, ಗ್ರಾಮೀಣ ಭಾಗದ ಜನರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ರೈತರ ಬೆಳೆ ನಷ್ಟ, ವಿದ್ಯುತ್ ಅವಘಡ, ಕುಡಿಯುವ ನೀರಿನ ಸಮಸ್ಯೆ, ಪಶುಗಳಿಗೆ ಮೇವಿನ ಕೊರತೆ ಹಾಗೂ ಮಹಾನಗರ ಪಾಲಿಕೆಗೆ ಸೇರ್ಪಡೆಗೊಂಡ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳ ವಿಳಂಬ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿ, ಉಸ್ತುವಾರಿ ಸಚಿವರು ಹಾಗೂ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತಂದರು.
ಸಭೆಯಲ್ಲಿ ಕ್ಷೇತ್ರದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ ಶಾಸಕರು, ಕೇವಲ ಅನುದಾನ ಬಿಡುಗಡೆ ಮಾಡಿದರೆ ಸಾಲದು, ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು ಹಾಗೂ ಸಾರ್ವಜನಿಕರಿಗೆ ಅದರ ಪ್ರಯೋಜನ ತಲುಪುವಂತೆ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಬ್ಬು ಬೆಂಕಿ ಅವಘಡದಿಂದ ನಷ್ಟ ಅನುಭವಿಸಿದ ರೈತರಿಗೆ ತಕ್ಷಣ ಪರಿಹಾರ ನೀಡಿ:
ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಅವಘಡಗಳಿಂದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ. ವರ್ಷಪೂರ್ತಿ ಕಷ್ಟಪಟ್ಟು ಬೆಳೆದ ಬೆಳೆ ಕಣ್ಣೆದುರೇ ಸುಟ್ಟುಹೋಗಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂತ್ರಸ್ತ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ಒದಗಿಸಬೇಕು. ಬೆಳೆ ನಷ್ಟ ಸಮೀಕ್ಷೆ ನಡೆದು ಬರ ಘೋಷಣೆ ಆಗಿದೆ ರೈತರಿಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಪಾಯಕಾರಿ ವಿದ್ಯುತ್ ತಂತಿಗಳನ್ನು ತಕ್ಷಣ ಸರಿಪಡಿಸಿ:
ಗ್ರಾಮೀಣ ಪ್ರದೇಶಗಳಲ್ಲಿ ಜಮೀನುಗಳ ಮೇಲೆ ಹಾದುಹೋಗಿರುವ ವಿದ್ಯುತ್ ತಂತಿಗಳು ಹಾಗೂ ಹಾನಿಗೊಳಗಾದ ವಿದ್ಯುತ್ ಕಂಬಗಳಿAದ ಅಪಘಾತಗಳ ಸಂಭವ ಹೆಚ್ಚಾಗುವ ಆತಂಕವಿದೆ. ರೈತರ ಬೆಳೆಗಳಿಗೆ ಬೆಂಕಿ ತಗಲುವ ಘಟನೆಗಳನ್ನು ತಡೆಗಟ್ಟಲು ವಿದ್ಯುತ್ ಇಲಾಖೆಯ ಅಧಿಕಾರಿಗಳು ಕ್ಷೇತ್ರದಾದ್ಯಂತ ಪರಿಶೀಲನೆ ನಡೆಸಿ, ಅಪಾಯಕಾರಿ ತಂತಿಗಳನ್ನು ತಕ್ಷಣ ದುರಸ್ತಿಗೊಳಿಸಬೇಕು. ರೈತರು ಮತ್ತು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಕುಡಿಯುವ ನೀರಿಗಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಿ:
ಬೇಸಿಗೆ ಹಾಗೂ ತೀವ್ರ ಬರ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಗುರುತಿಸಿ, ಅಗತ್ಯವಿರುವ ಕಡೆ ಬೋರ್ವೆಲ್ ದುರಸ್ತಿ, ಪೈಪ್ಲೈನ್ ಕಾಮಗಾರಿ ಹಾಗೂ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಜನರಿಗೆ ಶುದ್ಧ ಕುಡಿಯುವ ನೀರು ದೊರೆಯುವಂತೆ ಸಂಬAಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಜಾನುವಾರುಗಳಿಗೆ ನೀರು ಮತ್ತು ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ:
ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೂ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಪಶುಗಳಿಗೆ ಅಗತ್ಯ ಪ್ರಮಾಣದಲ್ಲಿ ಮೇವು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ, ಮೇವಿನ ಕೊರತೆ ಉಂಟಾಗದAತೆ ಮುಂಚಿತವಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ರೈತರ ಜಾನುವಾರುಗಳ ಸಂರಕ್ಷಣೆಗೆ ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆಗೆ ಸೇರ್ಪಡೆಗೊಂಡ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳಿಗೆ ತಕ್ಷಣ ಚಾಲನೆ ನೀಡಿ:
ಬೀದರ್ ಮಹಾನಗರ ಪಾಲಿಕೆಗೆ ಸೇರ್ಪಡೆಗೊಂಡ ಗ್ರಾಮಗಳ ಅಭಿವೃದ್ಧಿಗಾಗಿ ಈಗಾಗಲೇ ಅನುದಾನ ಬಿಡುಗಡೆಯಾಗಿದ್ದರೂ, ಹಲವು ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಟೆಂಡರ್ ಪ್ರಕ್ರಿಯೆಯ ವಿವಿಧ ಹಂತಗಳು ಬಾಕಿ ಉಳಿದಿರುವುದರಿಂದ ಅಭಿವೃದ್ಧಿ ಕಾಮಗಾರಿಗಳಲ್ಲಿ ವಿಳಂಬವಾಗುತ್ತಿದೆ. ಇದರಿಂದ ಈ ಗ್ರಾಮಗಳ ನಿವಾಸಿಗಳಿಗೆ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಿಂದ ಅನಾನುಕೂಲವಾಗುತ್ತಿದೆ.
ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬಾಕಿ ಉಳಿದಿರುವ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ಆದಷ್ಟು ಬೇಗ ಪ್ರಾರಂಭಿಸಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ಸಾರ್ವಜನಿಕರು ಇನ್ನಷ್ಟು ತೊಂದರೆ ಅನುಭವಿಸದಂತೆ ಸಂಬAಧಪಟ್ಟ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಬೇಕು ಎಂದು ಆಗ್ರಹಿಸಿದರು.
ರಾಜಗೀರ ಅಪಘಾತ ಮೃತಪಟ್ಟ ೭ ಕುಟುಂಬ ಹಾಗೂ ಮಾಂಜಾ ದಾರದಿಂದ ಮೃತಪಟ್ಟ ಬಂಬುಳಗಿ ಗ್ರಾಮದ ವ್ಯಕ್ತಿಗೆ ತಲಾ ೫ ಲಕ್ಷ ಪರಿಹಾರ ನೀಡಿ:
ರಾಜಗೀರ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ೭ ಕುಟುಂಬಗಳಿಗೆ ಹಾಗೂ ಮಾಂಜಾ ದಾರದಿಂದ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ವಾ ಕುಟುಂಬಕ್ಕೆ ತಲಾ ೫ ಲಕ್ಷ ಪರಿಹಾರ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಅಕಾಲಿಕವಾಗಿ ಜೀವ ಕಳೆದುಕೊಂಡವರ ಕುಟುಂಬಗಳು ಆರ್ಥಿಕ ಹಾಗೂ ಮಾನಸಿಕ ಸಂಕಷ್ಟ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಬೇಕು. ಮಾನವೀಯ ದೃಷ್ಟಿಯಿಂದ ತಲಾ ೫ ಲಕ್ಷ ಆರ್ಥಿಕ ಪರಿಹಾರ ಒದಗಿಸಿ, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು.





















