Home ಜಿಲ್ಲೆ ತಾಲೂಕು ಪಂಚಾಯತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ;ಕಲುಷಿತ ನೀರು ಸರಬರಾಜು ಆಗದಂತೆ ಮುಂಜಾಗ್ರತೆವಹಿಸಿ

ತಾಲೂಕು ಪಂಚಾಯತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ;ಕಲುಷಿತ ನೀರು ಸರಬರಾಜು ಆಗದಂತೆ ಮುಂಜಾಗ್ರತೆವಹಿಸಿ

ಔರಾದ್ :ಜು.31: ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ತಾಲೂಕಿನ ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿನ ಕುಡಿಯುವ ನೀರಿನ ಮೂಲಗಳನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಆದ್ಯತೆ ನೀಡಬೇಕು ಎಂದರು.

ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದು ಗ್ರಾಮಗಳ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ನಡೆಸಿ, ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ ಅವರು ಮಾತನಾಡಿ, ವಿಬಿ ಜಿ ರಾಮ್ ಜಿ
ಯೋಜನೆಯಡಿ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ ಗುಣಮಟ್ಟದ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಸಂಜುಕುಮಾರ್, ತಾಲೂಕಿನ ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಹಾಯಕರು, ಡಿಇಒರವರು, ಐಇಸಿ ಸಂಯೋಜಕ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.