ಪ್ರಗತಿ ಪರಿಶೀಲನಾ ಸಭೆ

ಧಾರವಾಡ, ಅ.25: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪದ್ಮಾವತಿ ಅವರ ಅಧ್ಯಕ್ಷತೆಯಲ್ಲಿ ಧಾರವಾಡ ತಾಲೂಕು ಪಂಚಾಯತ ಸಭಾಂಗಣದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜರುಗಿತ್ತು.


ಅವರು ಮಾತನಾಡಿ, ಉದ್ಯೋಗಿನಿ ಯೋಜನೆಯಡಿಯಲ್ಲಿ ದೇವದಾಸಿರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಯಾರೇ ಸಾಲ ಪಡೆಯಲು ಬ್ಯಾಂಕ್‍ಗಳಿಗೆ ಬಂದಲ್ಲಿ ಅವರಿಗೆ ಮೊದಲು ಆದ್ಯತೆಯನ್ನು ನೀಡಬೇಕು ಹಾಗೂ ಅವರಿಗೆ ಅರ್ಜಿಗಳನ್ನು ಭರ್ತಿ ಮಾಡಲು ಅಧಿಕಾರಿಗಳು ಸಹಾಯ ಮಾಡಬೇಕು. ಅವರು ಬ್ಯಾಂಕಿಗೆ ಅಲೆದಾಡದಂತೆ ಅನುಕೂಲಗಳನ್ನು ಮಾಡಿಕೊಡಬೇಕೆಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಅವರಿಗೆ ಹೇಳಿದರು.


ಭಿಕ್ಷಾಟನೆ ಮಾಡುವವರು ಯಾರಾದರೂ ಕಂಡುಬಂದಲ್ಲಿ ಅಂತವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಅಧಿಕಾರಿಗಳು ಗಮನ ಹರಿಸಬೇಕು ಹಾಗೂ ಅವರಿಗೆ ಸ್ವಯಂ ಉದ್ಯೋಗ ಮಾಡಲು ಉತ್ತೇಜಿಸಬೇಕು ಎಂದು ತಿಳಿಸಿದರು.


ಮಾಜಿ ದೇವದಾಸಿಯರ ಮರು ಸಮೀಕ್ಷೆಯನ್ನು, ದೇವದಾಸಿಯರ ಮಕ್ಕಳು ಸಹ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಸ್ವಾವಲಂಬನೆಯನ್ನು ಹೊಂದಬೇಕು. ಅದಕ್ಕಾಗಿ ಅಂತವರನ್ನು ಗುರುತಿಸಿ ಅವರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು ಎಂಬ ಉದ್ದೇಶದಿಂದ ಮಾಡಲಾಗುತ್ತಿದೆ ಎಂದು ಹೇಳಿದರು.
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯಲ್ಲಿ ಧಾರವಾಡ ಜಿಲ್ಲೆಯು ನಿಧಾನ ಗತಿಯಲ್ಲಿ ಸಾಗುತ್ತಿದೆ. ಅಧಿಕಾರಿಗಳು, ಎನ್‍ಜಿಓ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಆದಷ್ಟು ಬೇಗನೆ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕೆಂದು ಅವರು ತಿಳಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್.ಎಚ್.ಕುಕನೂರ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಭಿವೃದ್ಧಿ ನಿರೀಕ್ಷಕಿ ನಂದಿನಿ ಕುಂಬಾರ ಸಭೆ ನಿರ್ವಹಿಸಿ, ವಂದಿಸಿದರು.


ಸಭೆಯಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಅಕ್ಕಮಹಾದೇವಿ, ಧಾರವಾಡ ಜಿಲ್ಲಾ ಅಗ್ರಣೀಯ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಗಡಾದ್, ಜಿಲ್ಲಾ ನಿರೂಪಣಾಧಿಕಾರಿ ಡಾ. ಕಮಲಾ ಬೈಲೂರ, ಮಹಿಳಾ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮೀ ಪಾಟೀಲ, ದೇವದಾಸಿ ಪುನರ್ವಸತಿ ಯೋಜನೆಯ ನೋಡಲ್ ಅಧಿಕಾರಿ ಮಧುಸೂದನ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಮಾಜಿ ದೇವದಾಸಿಯರ ಪ್ರತಿನಿಧಿಗಳು, ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿಗಳು ಭಾಗವಹಿಸಿದ್ದರು.