
ಬೆಂಗಳೂರು, ಜೂ.೨೨: ಈಗಾಗಲೇ ಅಗತ್ಯ ವಸ್ತುಗಳ ದರ ಏರಿಕೆಯಿಂದ ಬಸವಳಿದಿರುವ ಶ್ರೀಸಾಮಾನ್ಯನಿಗೆ ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಟಿಕೆಟ್ ದರ ಏರಿಕೆ ಬಿಸಿ ತಟ್ಟಲಿದೆ. ಡೀಸೆಲ್ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಶೇ. ೩೩ ರಷ್ಟು ಹಾಗೂ ಬಿಎಂಟಿಸಿ ಟಿಕೆಟ್ ದರವನ್ನು ಶೇ. ೪೪ರಷ್ಟು ಏರಿಕೆ ಮಾಡುವಂತೆ ಸರ್ಕಾರಕ್ಕೆ ಅಧಿಕೃತವಾಗಿ ಪ್ರಸ್ತಾವನೆ ಸಲ್ಲಿಸಿವೆ.
ತೀವ್ರ ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ರಾಜ್ಯ ಸಾರಿಗೆ ಸಂಸ್ಥೆ ನಷ್ಟ ಅನುಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯಿಂದ ನಾಲ್ಕು ನಿಗಮಗಳು ಹಾಗೂ ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿದೆ.
ಇತ್ತೀಚೆಗಷ್ಟೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದರು. ಇದರ ಬೆನ್ನಲ್ಲೇ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಟಿಕೆಟ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ದರ ಏರಿಕೆಗೆ ಒಪ್ಪಿಗೆ ಸೂಚಿಸಿದರೆ, ಬಸ್ ಪ್ರಯಾಣದರ ಏರಿಕೆಯಾಗುವುದು ನಿಶ್ಚಿತವಾಗಲಿದೆ.
ರಾಜ್ಯ ಸರ್ಕಾರ ಈ ಹಿಂದೆ ೨೦೨೫ರ ಜನವರಿ ೫ರಿಂದ ಜಾರಿಗೆ ಬರುವಂತೆ ಸರ್ಕಾರಿ ಬಸ್‌ಗಳ ಟಿಕೆಟ್ ದರವನ್ನು ಶೇ. ೧೫ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಈಗ ಸಾರಿಗೆ ಸಂಸ್ಥೆಗಳು ಮತ್ತೊಮ್ಮೆ ದರ ಪರಿಷ್ಕರಣೆಗಾಗಿ ಸರ್ಕಾರಕ್ಕೆ ಹೊಸ ಪ್ರಸ್ತಾವನೆಯನ್ನು ಸಲ್ಲಿಸಿವೆ. ಸಾರಿಗೆ ನಿಗಮಗಳು ದರ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದು, ತಕ್ಷಣವೇ ಈ ಕ್ರಮ ಕೈಗೊಳ್ಳದಿದ್ದರೆ ಸಂಸ್ಥೆಗಳು ಸಂಪೂರ್ಣ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿವೆ ಎಂದು ಸಿಎಂಗೆ ಮನವರಿಕೆ ಮಾಡಿಕೊಟ್ಟಿವೆ.
ದರ ಏರಿಕೆಗೆ ಕಾರಣಗಳೇನು?
ಮೇ ೨೫ರವರೆಗಿನ ಇಂಧನ ದರ ಏರಿಕೆಯು ನಿಗಮಗಳ ಸೊರಗುವಿಕೆಗೆ ಪ್ರಮುಖ ಕಾರಣವಾಗಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಾಲ್ಕು ಬಾರಿ ಡೀಸೆಲ್ ದರ ಏರಿಕೆಯಾಗಿದೆ. ಇದರಿಂದಾಗಿ ಪ್ರತಿ ಲೀಟರ್ ಡೀಸೆಲ್ ಬೆಲೆಯಲ್ಲಿ ಬರೋಬ್ಬರಿ ೭.೮೧ ರೂ. ಏರಿಕೆಯಾಗಿದೆ.
ಪ್ರತಿ ನಿತ್ಯ ನಾಲ್ಕೂ ನಿಗಮಗಳ ಬಸ್‌ಗಳಿಗೆ ೧೩ ಲಕ್ಷ ಲೀಟರ್‌ಗೂ ಹೆಚ್ಚು ಡೀಸೆಲ್ ಬಳಕೆಯಾಗುತ್ತಿದೆ. ಈ ಇಂಧನ ದರ ಏರಿಕೆಯಿಂದಾಗಿ ಸಾರಿಗೆ ನಿಗಮಗಳಿಗೆ ತಿಂಗಳಿಗೆ ೪೦ ಕೋಟಿ ರೂ. ಹಾಗೂ ವರ್ಷಕ್ಕೆ ಬರೋಬ್ಬರಿ ೪೮೦ ಕೋಟಿ ರೂ.ಗಳ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ.
ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಉಚಿತ ಬಸ್ ಪ್ರಯಾಣ ಯೋಜನೆ, ಇನ್ನೊಂದೆಡೆ ದಿನೇ ದಿನೇ ಗಗನಕ್ಕೇರುತ್ತಿರುವ ನಿರ್ವಹಣಾ ವೆಚ್ಚ ಹಾಗೂ ಸಾರಿಗೆ ನೌಕರರ ವೇತನ ಪರಿಷ್ಕರಣೆ ಈ ತ್ರಿವಳಿ ಸವಾಲುಗಳಿಂದಾಗಿ ಸಾರಿಗೆ ನಿಗಮಗಳ ಮೇಲಿನ ಆರ್ಥಿಕ ಹೊರೆ ಮತ್ತು ಆಡಳಿತಾತ್ಮಕ ಜವಾಬ್ದಾರಿ ಈಗ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ.
ಈಗಾಗಲೇ ನಷ್ಟದ ಸುಳಿಗೆ ಸಿಲುಕಿರುವ ಸಾರಿಗೆ ಸಂಸ್ಥೆಗಳನ್ನು ಉಳಿಸಿಕೊಳ್ಳಲು ಟಿಕೆಟ್ ದರ ಏರಿಕೆ ಅನಿವಾರ್ಯ ಎಂಬುದು ಅಧಿಕಾರಿಗಳ ವಾದವಾಗಿದೆ. ಸದ್ಯ ಪ್ರಸ್ತಾವನೆ ಮುಖ್ಯಮಂತ್ರಿಗಳ ಅಂಗಳದಲ್ಲಿದ್ದು, ಸರ್ಕಾರ ಎಷ್ಟು ಪ್ರಮಾಣದ ದರ ಏರಿಕೆಗೆ ಹಸಿರು ನಿಶಾನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.





























