Home Lead News ಜ್ಞಾನೇಂದ್ರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅಸ್ತು

ಜ್ಞಾನೇಂದ್ರ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅಸ್ತು

ಬೆಂಗಳೂರು.ಅ.೨೪– ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯೊಂದರಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಸಿಎಂ ಡಿಕೆ ಶಿವಕುಮಾರ್ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಕೆಪಿಎಸ್‌ಸಿ ನೇಮಕಾತಿ ಭ್ರಷ್ಟಾಚಾರ ಆರೋಪದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ.

ಜ್ಞಾನೇಂದ್ರ ಕುಮಾರ್ ವಿರುದ್ಧದ ಪ್ರಾಸಿಕ್ಯೂಷನ್ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಆದೇಶ ಹೊರಡಿಸಿದ್ದು, ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನೇಂದ್ರ ವಿರುದ್ಧದ ಕಾನೂನು ಕ್ರಮ ಹಾಗೂ ತನಿಖೆಗೆ ಅನುಮತಿ ನೀಡಿದ್ದಾರೆ.

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ ಸಂಬಂಧದ ಕಡತ ಮತ್ತು ಅದರಲ್ಲಿನ ದಾಖಲೆಗಳನ್ನು ಪರಿಶೀಲಿಸಿದೆ. ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ ಕಲಂ ೨೧೮ರ ಅನ್ವಯ ಅಭಿಯೋಜನಾ ಮಂಜೂರಾತಿ ನೀಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗದ ಪಶು ವೈದ್ಯಾಧಿಕಾರಿ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ನೇಮಕಾತಿಯಲ್ಲಿ ಹಗರಣ ನಡೆದಿರುವ ಆರೋಪ ಇತ್ತು. ಈ ಆರೋಪದಡಿಯಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರು ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದರು.

ಜ್ಞಾನೇಂದ್ರ ಕುಮಾರ್ ಗಂಗ್ವಾರ್‌ರನ್ನು ಇಡಿ ತನಿಖೆಗೆ ಒಳಪಡಿಸಿತ್ತು. ಅವರ ೧೪ ದಿನಗಳ ಕಸ್ಟಡಿ ಅವಧಿ ಮುಕ್ತಾಯಗೊಂಡ ಬಳಿಕ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಗಂಗ್ವಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ ಆರೋಪ ಜ್ಞಾನೇಂದ್ರ ಮೇಲಿದೆ.ಗಂಗ್ವಾರ್ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಮತ್ತು ಬಸವರಾಜ್ ಕನ್ನಾಳೆ ಪಿತೂರಿ ನಡೆಸಿ ಸೋರಿಕೆ ಮಾಡಿದ್ದಾರೆ ಎಂಬ ಅಂಶ ತನಿಖೆಯಿಂದ ದೃಢಪಟ್ಟಿತ್ತು. ಅಲ್ಲದೆ, ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ಆಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿದ್ದಾರೆ ಎಂದು ಇ ಡಿ ತನಿಖೆಯಿಂದ ಬಹಿರಂಗಗೊಂಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಕನ್ನಾಳೆಯು ೧.೫೦ ಕೋಟಿ ಲಂಚವನ್ನು ಮುಂಗಡವಾಗಿ ಸಂಗ್ರಹಿಸಿದ್ದನು.ಈ ಹಣದ ಈ ಪೈಕಿ ೧.೩೦ ಕೋಟಿಯನ್ನು ಗಂಗ್ವಾರ್‌ಗೆ ನಗದಿನ ರೂಪದಲ್ಲಿ ಪಾವತಿಸಲಾಗಿದೆ. ಈ ಹಣದಲ್ಲಿ ಕೆಪಿಎಸ್‌ಸಿ ಮಾಜಿ ಅಧಿಕಾರಿಗೆ ೨೩ ಲಕ್ಷದಲ್ಲಿ ಚಿನ್ನಾಭರಣ ಖರೀದಿಸಲಾಗಿದೆ ಎಂದು ಇಡಿ ಆರೋಪ ಮಾಡಿದೆ.

ಜನವರಿ ೯ರಂದು ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಗಳನ್ನು ಹಾಗೂ ಉತ್ತರವನ್ನು ಗಂಗ್ವಾರ್ ಜ.೭ರಂದು ಪ್ರಕರಣದ ಕಿಂಗ್ ಪಿನ್ ಕನ್ನಾಳೆಗೆ ಎಚ್‌ಪಿ ಪೆನ್‌ಡ್ರೈವ್ ಮೂಲಕ ನೀಡಿದ್ದರು ಎಂಬುದು ಆರೋಪವಾಗಿದೆ.

ಕೆಪಿಎಸ್‌ಸಿ ಹಗರಣ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿತ್ತು. ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಇದೀಗ ಬಂಧನದಲ್ಲಿದ್ದಾರೆ.

ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ಭಾಲ್ಕಿಯ ಬಿಜೆಪಿ ಮುಖಂಡ ಬಸವರಾಜ ಕನ್ನಾಳೆ ಅವರನ್ನು ವಶಕ್ಕೆ ಪಡೆದು ಸಿಐಡಿ ಪೊಲೀಸರು ಆಳವಾದ ವಿಚಾರಣೆ ನಡೆಸುತ್ತಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಮೂಲವನ್ನು ಪತ್ತೆಹಚ್ಚಲು ಮತ್ತು ಪ್ರಭಾವಿ ವ್ಯಕ್ತಿಗಳ ನಂಟನ್ನು ಬಯಲಿಗೆಳೆಯಲು ತನಿಖಾ ತಂಡವು ತೀವ್ರ ಕಸರತ್ತು ನಡೆಸುತ್ತಿದೆ. ಈಗಾಗಲೇ ಕೈಗೆತ್ತಿಕೊಂಡಿರುವ ಸಿಐಡಿ ಪೊಲೀಸರು ಹಲವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಯುವಜನತೆಯ ಭವಿಷ್ಯದ ಜೊತೆ ಆಟವಾಡುವ ಯಾವುದೇ ಕೃತ್ಯಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಾರ್ವಜನಿಕ ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಭ್ರಷ್ಟಾಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಗೆ ಆದ್ಯತೆ ನೀಡುವುದು ನಮ್ಮ ಬದ್ಧತೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ಆಡಳಿತಕ್ಕೆ ಕಪ್ಪುಚುಕ್ಕೆ ತರುವ ಕೃತ್ಯಗಳಿಗೆ ಮನ್ನಣೆಯಿಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.