Home ಜಿಲ್ಲೆ ಕಲಬುರಗಿ ಮಾದಕ ವಸ್ತುಗಳ ಸೇವನೆ ಮತ್ತು ದುಶ್ಚಟಗಳಿಂದ ದೂರವಿದ್ದು ಕುಟುಂಬ ಹಾಗೂ ಸಮಾಜ ರಕ್ಷಿಸಿ: ನ್ಯಾಯಾಧೀಶ ಶ್ರೀನಿವಾಸ...

ಮಾದಕ ವಸ್ತುಗಳ ಸೇವನೆ ಮತ್ತು ದುಶ್ಚಟಗಳಿಂದ ದೂರವಿದ್ದು ಕುಟುಂಬ ಹಾಗೂ ಸಮಾಜ ರಕ್ಷಿಸಿ: ನ್ಯಾಯಾಧೀಶ ಶ್ರೀನಿವಾಸ ನವಲೆ

ಕಲಬುರಗಿ: ಯುವಶಕ್ತಿಯೇ ರಾಷ್ಟ್ರದ ನಿಜವಾದ ಸಂಪತ್ತು. ಆ ಅಮೂಲ್ಯ ಶಕ್ತಿಯನ್ನು ಮಾದಕ ವಸ್ತುಗಳು ಹಾಗೂ ದುಶ್ಚಟಗಳ ದಾಸ್ಯಕ್ಕೆ ಒಪ್ಪಿಸದೆ, ಜ್ಞಾನ, ವಿಜ್ಞಾನ, ಕ್ರೀಡೆ, ಸಂಸ್ಕøತಿ, ಸಾಹಿತ್ಯ ಮತ್ತು ಸಮಾಜಸೇವೆಯ ಸತ್ಕಾರ್ಯಗಳಿಗೆ ಬಳಸಿಕೊಳ್ಳುವ ಮೂಲಕ ವ್ಯಸನ ಮುಕ್ತ ಭಾರತ ನಿರ್ಮಾಣಕ್ಕೆ ಯುವಕರು ಮುಂದಾಗಬೇಕು ಎಂದು ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಮೂರ್ತಿ ಶ್ರೀನಿವಾಸ ನವಲೆ ಕರೆ ನೀಡಿದರು.
ನಗರದ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ಸ್ಟೇಷನ್ ಬಜಾರ್, ಕಲಬುರಗಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೆÇಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನಶಾ ಮುಕ್ತ ಭಾರತ ಅಭಿಯಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ಕ್ಷಣಿಕ ಆಸೆ, ಆಮಿಷಗಳಿಗೆ ಒಳಗಾಗಿ ಮಾದಕ ವಸ್ತುಗಳ ಸೇವನೆ ಮತ್ತು ವಿವಿಧ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇಂತಹ ಚಟುವಟಿಕೆಗಳು ವ್ಯಕ್ತಿಯ ಆರೋಗ್ಯವನ್ನಷ್ಟೇ ಅಲ್ಲದೆ ಕುಟುಂಬದ ನೆಮ್ಮದಿ ಮತ್ತು ಸಮಾಜದ ಸ್ವಾಸ್ಥ್ಯವನ್ನೂ ಹಾಳುಮಾಡುತ್ತವೆ. ಮಾದಕ ವಸ್ತುಗಳ ಸಾಗಣೆ, ಮಾರಾಟ ಮತ್ತು ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಸರ್ಕಾರ ಎನ್‍ಡಿಪಿಎಸ್ ಕಾಯ್ದೆಯಂತಹ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದೆ. ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಇಂತಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯಗಳ ವ್ಯವಸ್ಥೆಯೂ ಇದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯವು ಮಾದಕ ವಸ್ತುಗಳ ಹಾವಳಿಯಿಂದ ಮುಕ್ತವಾಗಿರಬೇಕು. ನಮ್ಮ ರಾಜ್ಯವು ‘ಉಡ್ತಾ ಪಂಜಾಬ್’ನಂತಹ ಪರಿಸ್ಥಿತಿಗೆ ತಲುಪಬಾರದು. ವಿಶೇಷವಾಗಿ ಕಲಬುರಗಿ ಜಿಲ್ಲೆಯ ಯುವಜನತೆ ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ, ಜಾಗೃತಿಯಿಂದ ಬದುಕಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ವ್ಯಸನ ಮುಕ್ತ ಸಮಾಜ ನಿರ್ಮಾಣದ ರಾಯಭಾರಿಯಾಗಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಬಲರಾಮ್ ಚವ್ಹಾಣ್ ಮಾತನಾಡಿ, ಪ್ರತಿಯೊಬ್ಬ ಯುವಕ ಮತ್ತು ಯುವತಿಯರು ದೇಶದ ಅಮೂಲ್ಯ ಸಂಪತ್ತಾಗಿದ್ದಾರೆ. ದುಶ್ಚಟಗಳು ವ್ಯಕ್ತಿಯ ಭವಿಷ್ಯವನ್ನೇ ಹಾಳುಮಾಡುವ ಅಪಾಯ ಹೊಂದಿವೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರವಿರುವುದರ ಜೊತೆಗೆ, ಅವುಗಳನ್ನು ನಿಯಂತ್ರಿಸುವ ಕಾನೂನುಗಳ ಬಗ್ಗೆಯೂ ಅರಿವು ಹೊಂದಿರಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದರು.ಇದೇ ಸಂದರ್ಭದಲ್ಲಿ ಉಪನ್ಯಾಸಕಿ ವಿಜಯಲಕ್ಷ್ಮಿ ರೆಡ್ಡಿ ಅವರು ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ನಿರ್ಮಾಣದ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಉಪನ್ಯಾಸಕ ಪಾಂಡು ಎಲ್. ರಾಠೋಡ್ ನಿರ್ವಹಿಸಿದರು. ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಡಾ. ಶಿಲಾವತಿ ವಾಡೇಕರ್ ವಂದಿಸಿದರು.
ಕಾರ್ಯಕ್ರಮದಲ್ಲಿ ಶ್ರೀನಿವಾಸ ಐಜಿ, ರೇಣುಕಾ ಚಿಕ್ಕಮೇಟಿ, ಶಶಿಧರ ಭೂಸನೂರ, ರಾಜೇಶ್ವರಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.