
ಹುಮನಾಬಾದ್: ಕನ್ನಡ ನಾಡು, ನುಡಿ, ಕಲೆ ಹಾಗೂ ವಾಸ್ತುಶಿಲ್ಪಕ್ಕೆ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಪರಂಪರೆ ಇದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಕನ್ನಡ ನಾಡಿಗಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದು ಶಾಸಕ ಡಾ .ಸಿದ್ದು ಪಾಟೀಲ್ ಹೇಳಿದರು.
ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಕನ್ನಡ ಭಾಷೆಯ ಮಹತ್ವ ತಿಳಿಸಿಕೊಡಬೇಕು. ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಮನೆಗಳಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲಿಯೇ ಮಾತನಾಡುವ ಮೂಲಕ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಕನ್ನಡ ನಾಡಿನ ಇತಿಹಾಸ, ಸಂಸ್ಕøತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.
ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ ಜಗದೀಶ ಚೌರ ಮಾತನಾಡಿ. ಕರ್ನಾಟಕವು ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ರಾಜ್ಯಗಳಲ್ಲಿ ಒಂದಾಗಿದ್ದು, ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ ಹಾಗೂ ವಾಸ್ತುಶಿಲ್ಪ ಕ್ಷೇತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿದೆ. ಕನ್ನಡ ಭಾಷೆಯ ಶ್ರೀಮಂತಿಕೆ ಹಾಗೂ ಸಾಂಸ್ಕೃತಿಕ ವೈಭವದಿಂದ ಕರ್ನಾಟಕವು ದೇಶ-ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದೆ
ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು, ಅನೇಕ ಮಹಾನ್ ಸಾಹಿತಿಗಳು, ಕವಿಗಳು ಹಾಗೂ ಕಲಾವಿದರು ಕನ್ನಡ ನಾಡಿನ ಕೀರ್ತಿಯನ್ನು ಜಗತ್ತಿನಾದ್ಯಂತ ಪಸರಿಸಿದ್ದಾರೆ. ನಮ್ಮ ನಾಡಿನ ಕಲೆ, ಸಂಸ್ಕೃತಿ, ಐತಿಹಾಸಿಕ ಸ್ಮಾರಕಗಳು ಹಾಗೂ ಅದ್ಭುತ ವಾಸ್ತುಶಿಲ್ಪ ಪರಂಪರೆ ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿಗಳಾಗಿವೆ ಎಂದು ಹೇಳಿದ ಅವರು
ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ಯುವಜನತೆ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ, ನಾಡಿನ ಇತಿಹಾಸ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು. ಕನ್ನಡ ನಾಡಿನ ಏಕತೆ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಕಾಪಾಡಿಕೊಂಡು ಅಭಿವೃದ್ಧಿಯತ್ತ ಸಾಗಬೇಕು ಎಂದು ಕರೆ ನೀಡಿದರು.
ಚಿದಾನಂದ ಚಿಕ್ಕಮಠ ವಿಶೇಷ ಉಪನ್ಯಾಸಕ ನೀಡಿದರು
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕಲ್, ಪುರಸಭೆ ಮುಖ್ಯಾಧಿಕಾರಿ ವನೀತಾಬಾಯಿ, ಕಂದಾಯ ನಿರೀಕ್ಷಕ ರಾಹುಲದೇವ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಕಾಂತ ಸೂಜಿ, ಸುಭಾಷ ಆರ್ಯ,
ರವೀಂದ್ರರೆಡ್ಡಿ ಮಾಲಿ ಪಾಟೀಲ್, ಭುವನೇಶ್ವರಿ , ಶಿವಪುತ್ರ ಮಾಳೆ, ಮಲ್ಲಿಕಾರ್ಜುನ್ ಸಂಗಂಕರ್, ಸುರೇಶ ಘಾಂಗ್ರೆ, ಗಜೇಂದ್ರ ಕನಕಟ್ಟಕರ್, ರಮೇಶ್ ಕಲ್ಲೂರು, ವಿನಾಯಕ್, ರವಿ ಹೊಸಳ್ಳಿ, ಗಿರೀಷ ತುಂಬಾ, ಜ್ಞಾನದೇವ ಧುಮಾಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.























