Home ಜಿಲ್ಲೆ ಬೆಂಗಳೂರು ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ; ಕಾಂಗ್ರೆಸ್ ಕಾರ್ಯಕರ್ತರ ಬಂಧನ

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ; ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಬೆಂಗಳೂರು, ಜು. ೨೧- ದೆಹಲಿಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿರುವ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಸಲಾಯಿತು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಆನಂದ್, ಆದಿತ್ಯ, ಪುಟ್ಟರಾಜು , ಕುಶಲ್ ಹರುವೇಗೌಡ, ನವೀನ್, ಉಮೇಶ್, ಚಂದ್ರಶೇಖರ್ ,ಉಮೇಶ್,ರಂಜಿತ್,ಹೇಮರಾಜ್, ಪ್ರವೀಣ್, ಓಬಲೇಶ್ ಹಾಗೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ ಎಸ್. ಮನೋಹರ್ ಅವರು, ಕಳೆದ ೧೨ ವರ್ಷಗಳಲ್ಲಿ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ೧೪೦ಕ್ಕೂ ಹೆಚ್ಚು ಬಾರಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಈ ಪ್ರಕರಣಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಅವರ ಪುತ್ರರ ಹೆಸರುಗಳು ಕೇಳಿಬಂದಿವೆ ಎಂದು ಆರೋಪಿಸಿದರು.


ನೀಟ್ ಪರೀಕ್ಷೆಗೆ ಸುಮಾರು ೨೨ ಲಕ್ಷ ವಿದ್ಯಾರ್ಥಿಗಳು ತಯಾರಿ ನಡೆಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ ಎಂದು ಅವರು ಹೇಳಿದರು.
ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಟಿಯರ್ ಗ್ಯಾಸ್ ಪ್ರಯೋಗಿಸಿ, ಲಾಠಿಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತಂದಿರುವ ಘಟನೆ ಎಂದು ಅವರು ಆರೋಪಿಸಿದರು.


ಸತ್ಯವನ್ನು ಪ್ರಶ್ನಿಸಲು ಬಂದ ವಿದ್ಯಾರ್ಥಿಗಳಿಗೆ ಲಾಠಿಯ ಮೂಲಕ ಉತ್ತರ ನೀಡಲಾಗಿದೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಅವರು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣ ರಾಜೀನಾಮೆ ನೀಡಬೇಕು. ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಹೇಳಿದರು.