Home ಜಿಲ್ಲೆ ನಾಳೆ ಯು.ಪಿ.ಎ ಅಂಗಪಕ್ಷಗಳಿಂದ ಬೀದರ್‍ನಲ್ಲಿ ಪ್ರತಿಭಟನೆ: ಮನ್ನಾನ್ ಸೇಠ್

ನಾಳೆ ಯು.ಪಿ.ಎ ಅಂಗಪಕ್ಷಗಳಿಂದ ಬೀದರ್‍ನಲ್ಲಿ ಪ್ರತಿಭಟನೆ: ಮನ್ನಾನ್ ಸೇಠ್

ಬೀದರ್: ದೇಶದಲ್ಲಿ ಸುಮಾರು 13 ಕೋಟಿ ಹಾಗೂ ಕರ್ನಾಟಕದಲ್ಲಿ 1 ಕೋಟಿಗೂ ಹೆಚ್ಚು ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿ, ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಇಂಡಿಯಾ ಮೈತ್ರಿಕೂಟದ ಅಂಗ ಪಕ್ಷಗಳಾದ ಸಿಪಿಎಂ ಮತ್ತು ಸಿಪಿಐ ತೀವ್ರ ಆಕ್ರೋಶ ವ್ಯಕ್ತಪಡಿಸಿರುವುದಾಗಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಬ್ದುಲ್ ಮನ್ನಾನ್ ತಿಳಿಸಿದರು.
ಶನಿವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಕಡಿತದ ಹಿಂದಿರುವ ಷಡ್ಯಂತ್ರ ಹಾಗೂ ನಕಲಿ ಪ್ರಕ್ರಿಯೆಗಳ ಬಗ್ಗೆ ಇಂಡಿಯನ್ ಎಕ್ಸ್‍ಪ್ರೆಸ್ ಮೂಲಕ ಮಾಹಿತಿ ಬಹಿರಂಗವಾಗಿದೆ ಎಂದು ತಿಳಿಸಿದರು.
ಈ ಅನ್ಯಾಯದ ವಿರುದ್ಧ ಅಕ್ಟೋಬರ್ 10 ರಂದು ದೆಹಲಿಯಲ್ಲಿ ವಿರೋಧ ಪಕ್ಷಗಳು ಮತ್ತು ಯುವಜನರು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ ಎಂದರು.
ಪ್ರತಿಭಟನೆಯನ್ನು ಹತ್ತಿಕ್ಕುವ ಉದ್ದೇಶದಿಂದ ದೆಹಲಿಯ 57 ಮೆಟ್ರೋ ರೈಲು ನಿಲ್ದಾಣಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. 50,000ಕ್ಕೂ ಹೆಚ್ಚು ಅರೆಸೇನಾ ಪಡೆಗಳನ್ನು (ಪ್ಯಾರಾಮಿಲಿಟರಿ ಫೆÇೀರ್ಸ್) ನಿಯೋಜಿಸುವ ಮೂಲಕ ದೆಹಲಿ ನಗರವನ್ನು ಒಂದು ಸೇನಾ ಕಂಟೋನ್ಮೆಂಟ್ ರೀತಿಯಲ್ಲಿ ಮಾರ್ಪಡಿಸಲಾಗಿತ್ತು ಎಂದ ಅವರು, ವಿರೋಧ ಪಕ್ಷದ ಪ್ರಮುಖ ನಾಯಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದಲ್ಲಿ ತಪ್ಪನ್ನು ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಅವರು ಖಂಡಿಸಿದರು.
ಎಐಸಿಸಿ ನಿರ್ದೇಶನದ ಮೇರೆಗೆ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಲಾಗಿದೆ. ಇದರ ಭಾಗವಾಗಿ ನಾಳೆ (12ನೇ ತಾರೀಖಿನಂದು) ಬೆಳಿಗ್ಗೆ 11 ಗಂಟೆಗೆ ಬೀದರ್‍ನ ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿಯ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಪ್ರತಿಭಟನೆಯಲ್ಲಿ ಇಂಡಿಯಾ ಮೈತ್ರಿಕೂಟದ ಎಲ್ಲಾ ಪಾಲುದಾರರು, ವಿಶೇಷವಾಗಿ ಸಿಪಿಐ ಮತ್ತು ಸಿಪಿಎಂ ನಾಯಕರು ಜೊತೆಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮನ್ನಾನ್ ಸ್ಪಷ್ಟಪಡಿಸಿದರು.
​ಸಿಪಿಐ ಜಿಲ್ಲಾಧ್ಯಕ್ಷ ಬಾಬುರಾವ ಹೊನ್ನಾ, ಸಿಪಿಐಎಂ ಜಿಲ್ಲಾ ಪ್ರಮುಖರಾದ ಪ್ರಭು ಸಂತೋಷಕರ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ ಅಪ್ಪೆ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾರ್ಜ್ ಫರ್ನಾಂಡಿಸ್, ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಗೋವರ್ಧನ ರಾಠೋಡ, ಸಿ.ಪಿ.ಐ.ಎಂ ಉಪಾಧ್ಯಕ್ಷೆ ರೇಷ್ಮಾ ಹಂಸರಾಜ, ಸಿ.ಪಿ.ಐ ಜಿಲ್ಲಾ ಸಹ ಕಾರ್ಯದರ್ಶಿ ಶಿಪಾಯತ ಅಲಿ, ವಿನೋದ ಮಾಳಗೆ ಹಾಗೂ ಇತರರು ಪತ್ರಿಕಾಗೋಷ್ಟಿಯಲ್ಲಿದ್ದರು.