
ಕಲಬುರಗಿ,ಜ.20-ಪ್ರತಿ ಕ್ವಿಂಟಾಲ್ ತೊಗರಿಗೆ 12,500 ರೂ.ಬೆಂಬಲ ಬೆಲೆ ನಿಗದಿ ಪಡಿಸಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ (ಕಲಬುರಗಿ) ನೇತೃತ್ವದಲ್ಲಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.
ಹಾಲು ಉತ್ಪಾದಕರ ಸಹಕಾರ ಸಂಘಗಳ (ಕೆಎಂಎಫ್) ಮಾದರಿಯಲ್ಲಿ ತೊಗರಿ ಖರೀದಿ ಕೇಂದ್ರ ತೆರೆಯಬೇಕು, ಪ್ರತಿ ಕ್ವಿಂಟಾಲ್ ತೊಗರಿಗೆ ರಾಜ್ಯ ಸರ್ಕಾರ 1000/- ಮತ್ತು ಕೇಂದ್ರ ಸರ್ಕಾರ 1000/-ರೂ.ಪ್ರೋತ್ಸಾಹ ಧನ ನೀಡಬೇಕು, ಹೊರ ದೇಶದ ತೊಗರಿ ಮೇಲೆ ಶೇ.50 ರಷ್ಟು ಆಮದು ಸುಂಕ ಹಾಕಬೇಕು, ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಾ ಮನ್ನಾ ಮಾಡಬೇಕು ಎಂದು ಆಗ್ರಹಿಸಲಾಯಿತು.
ಕೆಪಿಆರ್‍ಎಸ್ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಎಐಕೆಎಸ್ ಜಿಲ್ಲಾ ಅಧ್ಯಕ್ಷ ಭೀಮಾಶಂಕರ ಮಾಡಿಯಾಳ್, ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ., ಕೆಆರ್‍ಆರ್‍ಎಸ್ ಜಿಲ್ಲಾ ಅಧ್ಯಕ್ಷ ನಾಗೇಂದ್ರಪ್ಪ ತಂಬೆ, ಮೌಲಾ ಮುಲ್ಲಾ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






















