ವಿಬಿ ಜಿ ರಾಮ್ ಜಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ

ಬೀದರ್: ಜ.25:ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಿ, ವಿಬಿ ಜಿ ರಾಮ್ ಜಿ ಕಾಯ್ದೆ ರೂಪಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಘಟಕವು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಶಿವನಗರದ ಪಕ್ಷದ ಕಚೇರಿಯಿಂದ ಹೊಸ ಬಸ್ ನಿಲ್ದಾಣ, ಗುರುದ್ವಾರ ಕಮಾನ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿದರು. ಬಳಿಕ ವಿಬಿ ಜಿ ರಾಮ್ ಜಿ ಕಾಯ್ದೆ ರದ್ದುಪಡಿಸುವಂತೆ ರಾಷ್ಟ್ರಪತಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಪುಂಡಲೀಕರಾವ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಹಣಮಂತರಾವ್ ಚೌಹಾಣ್, ನಗರಸಭೆ ಮಾಜಿ ಸದಸ್ಯ ಧನರಾಜ ಹಂಗರಗಿ, ಕೆಪಿಸಿಸಿ ಉಪಾಧ್ಯಕ್ಷ ಜಾನ್ ವೆಸ್ಲಿ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ ದೊಡ್ಡಿ, ಸಂಜಯ್ ಜಾಗೀರದಾರ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎ. ಸಮಿ, ದತ್ತಾತ್ರಿ ಮೂಲಗೆ, ಜಾರ್ಜ್ ಫನಾರ್ಂಡೀಸ್, ವಿನೋದಕುಮಾರ ಅಪ್ಪೆ, ಕಾರ್ಯದರ್ಶಿಗಳಾದ ಸುನೀಲ್ ಬಚ್ಚನ್, ರವೀಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಫರೀ???ಖಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದ್ ಯುಸೂಫ್, ಚಂದ್ರಶೇಖರ ಚನಶೆಟ್ಟಿ, ನೀಲಕಂಠ ರಾಠೋಡ್, ರಾಜಕುಮಾರ ಹಲಬರ್ಗೆ, ಆನಂದ ಚೌಹಾಣ್, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಸಂಜುಕುಮಾರ ಡಿ.ಕೆ, ರಾಕೇಶ ಕುರುಬಖೇಳಗಿ, ಡಾ. ಚಂದ್ರಕಾಂತ ಪಾಟೀಲ, ಪೂಜಾ ಜಾರ್ಜ್, ರಾಜಕುಮಾರ ಲದ್ದೆ, ಗೋವರ್ಧನ್ ರಾಠೋಡ್ ಮತ್ತಿತರರು ಪಾಲ್ಗೊಂಡಿದ್ದರು.


ಕೇಂದ್ರದಿಂದ ಗಾಂಧೀಜಿಗೆ ಅವಮಾನ: ಸಚಿವ ಖಂಡ್ರೆ ಆರೋಪ

ಬೀದರ್: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (ಮನರೇಗಾ) ಹೆಸರು ಮತ್ತು ಸ್ವರೂಪ ಬದಲಾಯಿಸಿರುವ ಕೇಂದ್ರ ಸರ್ಕಾರ ಬಡವರ ವಿರೋಧಿಯಷ್ಟೇ ಅಲ್ಲ, ಭಾರತದ ಒಕ್ಕೂಟ ವ್ಯವಸ್ಥೆಯ ವಿರೋಧಿಯೂ ಆಗಿದೆ ಎಂದು ಅರಣ್ಯ, ಪರಿಸರ, ಜೈವಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ದುಡಿಯುವ ಕೈಗಳಿಗೆ ಉದ್ಯೋಗದ ಭದ್ರತೆ ನೀಡಲು ಯುಪಿಎ ಸರ್ಕಾರ ಆರಂಭಿಸಿದ್ದ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶವನ್ನೇ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಹಾಳು ಮಾಡುತ್ತಿದೆ. ಇದು ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕ್ರಮವಾಗಿದ್ದು, ಸಾಮಾಜಿಕ ನ್ಯಾಯದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಸಮರ್ಪಿಸಿದ ಮಹಾತ್ಮ ಗಾಂಧಿ ಅವರ ಹೆಸರನ್ನೇ ಯೋಜನೆಯಿಂದ ತೆಗೆದು ಹಾಕಿರುವುದು ಬಾಪೂಜಿಗೆ ಮಾಡಿದ ಅವಮಾನವಾಗಿದೆ. ಅಷ್ಟೇ ಅಲ್ಲದೆ, ಯೋಜನೆಗೆ 60:40 ಅನುಪಾತವನ್ನು ಹೇರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹಾಕಲಾಗಿದೆ. ಜಿಎ???ಟಿ ಜಾರಿಯಾದ ಬಳಿಕ ರಾಜ್ಯಗಳಿಗೆ ದೊರಕುವ ತೆರಿಗೆ ಪಾಲು ಕಡಿಮೆಯಾಗಿದೆ. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಸಿಗಬೇಕಾದ ಅನುದಾನದಲ್ಲಿಯೂ ಕಡಿತವಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರದ ಈ ನಿರ್ಧಾರ ಒಕ್ಕೂಟ ವ್ಯವಸ್ಥೆಯ ಮೇಲೆ ನೇರ ದಾಳಿ ಎಂದು ಖಂಡಿಸಿದರು.
ಮನರೇಗಾ ಯೋಜನೆಯ ಹೆಸರು ತೆಗೆದು ಹಾಕುವುದರ ಜತೆಗೆ ಬಡವರ ಜೀವನೋಪಾಯದ ಮೇಲೂ ಹೊಡೆಯುವ ಈ ಕ್ರಮ ಅತಿರೇಕದ ಪರಮಾವಧಿಯಾಗಿದೆ. ಗ್ರಾಮೀಣ ಜನರ ಹಕ್ಕುಗಳನ್ನು ಕಾಪಾಡಲು ಮತ್ತು ಮನರೇಗಾ ಯೋಜನೆಯನ್ನು ಮರುಸ್ಥಾಪಿಸಲು ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ಕೋವಿಡ್ ಸಮಯದಲ್ಲಿ ಖಾತ್ರಿ ಯೋಜನೆ ಗ್ರಾಮೀಣ ಜನರು ಹಾಗೂ ವಲಸೆ ಕಾರ್ಮಿಕರ ಬದುಕಿಗೆ ಆಸರೆಯಾಗಿತ್ತು ಎಂದು ತಿಳಿಸಿದರು.