
ಚಿಕ್ಕಬಳ್ಳಾಪುರ, ನ.೪- ಚಿಕ್ಕಬಳ್ಳಾಪುರದಲ್ಲಿ ಮತ ಕಾವಲು ಸಮಿತಿಯ ಜಿಲ್ಲಾಧ್ಯಕ್ಷ ನೂರುಲ್ಲಾ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್ಐಆರ್ ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ನವೆಂಬರ್ ೫ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಎಸ್ಐಆರ್ ಪ್ರಕ್ರಿಯೆಯಿಂದ ದೇಶಾದ್ಯಂತ ಕೋಟ್ಯಂತರ ಅರ್ಹ ಮತದಾರರ ಹೆಸರುಗಳು ಕೈಬಿಡಲ್ಪಟ್ಟಿದ್ದು, ಕರ್ನಾಟಕದಲ್ಲಿಯೂ ಸುಮಾರು ಒಂದು ಕೋಟಿ ಮತದಾರರು ಮತದಾನದ ಹಕ್ಕು ಕಳೆದುಕೊಳ್ಳುವ ಆತಂಕ ಎದುರಾಗಿದೆ ಎಂದ ಅವರು, ನವೆಂಬರ್ ೧ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದವು ಮತ್ತು ಇದರ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರಿದಂತೆ ವಿವಿಧ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಬೆಂಬಲದೊಂದಿಗೆ ಈ ಹೋರಾಟ ನಡೆಯಲಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎಸ್ಐಆರ್ ಅಂತಿಮ ಪಟ್ಟಿಯ ಬದಲಿಗೆ ೨೦೨೫ರ ಮತದಾರರ ಪಟ್ಟಿಯ ಆಧಾರದಲ್ಲಿ ನಡೆಸಬೇಕು, ಚುನಾವಣಾ ಆಯೋಗದ ಅಂತಿಮ ಪಟ್ಟಿಯನ್ನು ತಿರಸ್ಕರಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂಬುದು ಒಕ್ಕೂಟದ ಪ್ರಮುಖ ಬೇಡಿಕೆಗಳಾಗಿವೆ ಎಂದು ಅವರು ಸ್ಪಷ್ಟಪಡಿಸಿದರು.
ಒಕ್ಕೂಟದ ಮುಖಂಡ ಶ್ರೀರಂಗಾಚಾರಿ ಮಾತನಾಡಿ, ಮತದಾರರ ಪಟ್ಟಿಯ ಲೋಪಗಳನ್ನು ಪ್ರಶ್ನಿಸುವವರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದ್ದು, ಎಸ್ಐಆರ್ನಿಂದ ಯಾವುದೇ ಹಾನಿಯಾಗುವುದಿಲ್ಲ ಎಂಬ ರಾಜ್ಯ ಸರ್ಕಾರದ ಸಚಿವರ ಹೇಳಿಕೆ ಸರಿಯಲ್ಲ ಎಂದು ಆಕ್ಷೇಪಿಸಿದರು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಡಾ. ಮಹಮ್ಮದ್ ನೂರುಲ್ಲಾ, ಶಮೀರ್, ಅಸ್ಗರ್ ಖಾನ್, ಜೀವಿಕ ನಾರಾಯಣಸ್ವಾಮಿ, ನಾರಾಯಣಪ್ಪ ಬಾಗೇಪಲ್ಲಿ, ಶ್ರೀನಿವಾಸ್ ಪಿ., ವೆಂಕಟೇಶ್ ಎಸ್. ಮತ್ತಿತರರು ಉಪಸ್ಥಿತರಿದ್ದರು.





















