
ಔರಾದ್:ಜೂ.14: ಗಡಿ ತಾಲೂಕುಗಳಾದ ಔರಾದ್ ಹಾಗೂ ಕಮಲನಗರ ಪ್ರದೇಶಗಳಲ್ಲಿ ಬಿತ್ತನೆ ಬೀಜಗಳ ಕೊರತೆ ಉಂಟಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಔರಾದ್ ಮತ್ತು ಕಮಲನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬಿತ್ತನೆ ಬೀಜಗಳ ವಿತರಣೆಯಲ್ಲಿ ಗಂಭೀರ ಸಮಸ್ಯೆಗಳು ಎದುರಾಗುತ್ತಿರುವ ಕುರಿತು ನಿರಂತರ ದೂರುಗಳು ಬರುತ್ತಿವೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಕೃಷಿ ಚಟುವಟಿಕೆಗಳು ಗರಿಷ್ಠ ಮಟ್ಟದಲ್ಲಿ ನಡೆಯಬೇಕಾದ ಸಮಯವಾಗಿದ್ದು, ಬೀಜಗಳ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ತಕ್ಷಣ ಕ್ರಮ ಕೈಗೊಂಡು, ಪ್ರತಿ ಗ್ರಾಮಕ್ಕೂ ಅಗತ್ಯ ಪ್ರಮಾಣದಲ್ಲಿ ಬಿತ್ತನೆ ಬೀಜಗಳನ್ನು ಪೂರೈಸುವ ಮೂಲಕ ರೈತರ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ರೈತರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ದಲಿತ ಸಂಘರ್ಷ ಸಮಿತಿ ಸಹಿಸುವುದಿಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಚಿವರಿಗೆ – ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆಯ ಮೂಲಕ ರೈತರಲ್ಲಿ ವಿಶ್ವಾಸ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಧನರಾಜ ಮುಸ್ತಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























