ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯ ಕಲ್ಪಿಸಿ

ಬೀದರ್: ಜೂ.27:ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸರ್ಕಾರದ ಸಕಲ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧು ಎಚ್.ಎಸ್. ರಘು ವಸತಿ ನಿಲಯಗಳ ಮೇಲ್ವಿಚಾರಕರಿಗೆ ಸೂಚಿಸಿದರು.
ಔರಾದ್ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ಔರಾದ್ ತಾಲ್ಲೂಕುಮಟ್ಟದ ವಸತಿ ನಿಲಯ ವಿದ್ಯಾರ್ಥಿಗಳ ಸುರಕ್ಷಾ ಮೇಲ್ವಿಚಾರಣಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.
ವಸತಿ ನಿಲಯಗಳಲ್ಲಿ ಬಹುತೇಕ ಬಡವರ ಮಕ್ಕಳು ಇರುತ್ತಾರೆ. ಊಟ, ವಸತಿ ಸೇರಿದಂತೆ ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಅವರ ಶೈಕ್ಷಣಿಕ ಏಳಿಗೆಗೆ ಪ್ರಯತ್ನಿಸಬೇಕು ಎಂದು ತಿಳಿಸಿದರು.
ವಸತಿ ನಿಲಯಗಳ ಏನೇ ಸಮಸ್ಯೆಗಳಿದ್ದರೂ ತಮ್ಮ ಗಮನಕ್ಕೆ ತರಬೇಕು. ಕೂಡಲೇ ಅವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಮಹೇಶ್ ಪಾಟೀಲ ಮಾತನಾಡಿ, ಕಾಲ ಕಾಲಕ್ಕೆ ವಸತಿ ನಿಲಯ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಬೇಕು. ವಸತಿ ನಿಲಯಗಳಲ್ಲಿ ಶುಚಿತ್ವ ಕಾಪಾಡಬೇಕು. ಒಳ್ಳೆಯ ಶೈಕ್ಷಣಿಕ ವಾತಾವರಣ ನಿರ್ಮಿಸಬೇಕು ಎಂದು ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಔರಾದ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರವೀಂದ್ರ ಮೇತ್ರೆ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಗಾಯತ್ರಿದೇವಿ, ಪಿಎಸ್‍ಐ ರೇಣುಕಾದೇವಿ, ಔರಾದ್ ತಾಲ್ಲೂಕಿನ ವಸತಿ ನಿಲಯಗಳು ಹಾಗೂ ಮೋರಾರ್ಜಿ ದೇಸಾಯಿ ವಸತಿ ಶಾಲೆಗಳ ಮೇಲ್ವಿಚಾರಕರು ಹಾಜರಿದ್ದರು.