
ಕೋಲಾರ,ಅ.೭:ಆಸಿಡ್ ದಾಳಿ ಸಂತ್ರಸ್ತರಿಗೆ ರಕ್ಷಣೆಯ ಜೊತೆಗೆ ಕಾನೂನು ಸೇವೆ ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾಧಿಕಾರಿ ಎಂ. ಆರ್. ರವಿಕುಮಾರ್ ಅಭಿಪ್ರಾಯಪಟ್ಟರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಭಾಂಗಣದಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮತ್ತು ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ನಾಲ್ಸಾ (ಎಸ್)ಯೋಜನೆಯಡಿ ಆಸಿಡ್ ದಾಳಿ ಸಂತ್ರಸ್ತರಿಗೆ ಕಾನೂನು ಸೇವೆಗಳು – ೨೦೧೬ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಸಮಾಜದಲ್ಲಿ ಕ್ಷುಲ್ಲಕ ಕಾರಣಗಳಿಗಾಗಿ, ಪ್ರೀತಿನಿರಾಕರ್ಮಣ ಸಂದರ್ಭಗಳಲ್ಲಿ ಹೆಣ್ಣುಮಕ್ಕಳ ಮೇಲೆ ಆಸಿಡ್ ಎರಚುವಂತಹ ವಿಕೃತ ಮನಸ್ಥಿತಿಗಳು ಹೆಚ್ಚಾಗುತ್ತಿದೆ ಎಂದರು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮತ್ತು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ. ಬಿ. ಪ್ರಸಾದ್,ಕಾನೂನು ಅಂಶಗಳ ಬಗ್ಗೆ ವಿಸ್ತೃತವಾಗಿ ವಿವರಿಸಿದರು. “ಭಾರತೀಯ ಸಂವಿಧಾನದ ೧೪ನೇ ವಿಧಿಯು ಪ್ರತಿಯೊಬ್ಬರಿಗೂ ಸಮಾನತೆಯ ಹಕ್ಕು ನೀಡಿದರೆ, ೨೧ನೇ ವಿಧಿಯು ಗೌರವಯುತವಾಗಿ ಬದುಕುವ ಹಕ್ಕು ಖಾತರಿಪಡಿಸುತ್ತದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಎಲ್. ಶ್ರೀನಿವಾಸ್ ಮಾತನಾಡಿ,ಯಾವುದೇ ಕಾನೂನಿನ ಅಂತಿಮ ಉದ್ದೇಶ ಸಮಾಜದ ಕಲ್ಯಾಣ ಮತ್ತು ರಕ್ಷಣೆಯಾಗಿದೆ ಎಂದು ತಿಳಿಸಿದರು
ವೇದಿಕೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು, ತಾಲೂಕು ಆರೋಗ್ಯಾಧಿಕಾರಿ ಡಾ. ನಾರಾಯಣಸ್ವಾಮಿ, ಪೊಲೀಸ್ ಅಧಿಕಾರಿ ಲೋಕೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ಮತ್ತು ಇತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಅಂಗನವಾಡಿ ಮೇಲ್ವಿಚಾರಕಿಯರು, ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಾನೂನು ವಿದ್ಯಾರ್ಥಿಗಳು ಮತ್ತು ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.























