Home ಮುಖಪುಟ ಸುದ್ದಿ ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಕಾನೂನು

ಪ್ರಶ್ನೆ ಪತ್ರಿಕೆ ಸೋರಿಕೆ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಕಾನೂನು

ನವದೆಹಲಿ, ಜು. ೨೪- ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಗಳಿಗೆ ಕನಿಷ್ಠ ೫ ರಿಂದ ಗರಿಷ್ಠ ೧೦ ವರ್ಷದ ವರೆಗೂ ಜೈಲು ಶಿಕ್ಷೆ ಹಾಗೂ ೧ ಕೋಟಿ ರೂಪಾಯಿ ದಂಡ ವಿಧಿಸುವ ಕಠಿಣ ಕಾನೂನನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.


ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ನಿನ್ನೆ ಪ್ರಕಟಿಸಿದ ಪ್ರಧಾನಿ ನರೇಂದ್ರ ಮೋದಿಯವರು ತಡರಾತ್ರಿ ವಿಡಿಯೋ ಸಂದೇಶದ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ ವಿಧಿಸುವ ಕಠಿಣ ಕಾಯ್ದೆಯನ್ನು ಜಾರಿ ಮಾಡುವುದಾಗಿ ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಸಾಮಾನ್ಯ ಹಾಗೂ ಸಣ್ಣ ವಿಚಾರವಲ್ಲ. ಹಾಗಾಗಿ ನಮ್ಮ ಸರ್ಕಾರ ಕಠಿಣ ಕಾಯ್ದೆಯನ್ನು ರೂಪಿಸಲಿದೆ. ಇಂದು ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ೧ ಕೋಟಿ ರೂ. ದಂಡ ವಿಧಿಸುವ ಕಠಿಣ ಕಾನೂನನ್ನು ಜಾರಿ ಮಾಡುವ ತೀರ್ಮಾನವನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.


ತ್ವರಿತ ನ್ಯಾಯಾಲಯಗಳಿಗೆ ಹೆಚ್ಚಿನ ಅಧಿಕಾರ ಹಾಗೂ ಆರೋಪಿಗಳಿಗೆ ಶಿಕ್ಷೆ ವಿಧಿಸುವ ಕಾನೂನನ್ನು ಕೇಂದ್ರ ಸಚಿವ ಸಂಪುಟದಲ್ಲಿ ಇಂದು ಅನುಮೋದನೆ ಪಡೆದುಕೊಂಡ ನಂತರ ಮುಂದಿನ ವಾರ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸುವ ಕಾಯ್ದೆ ಹಾಗೂ ತ್ವರಿತ ನ್ಯಾಯಾಲಯಗಳ ಸ್ಥಾಪನೆ ನಿರ್ಧಾರಕ್ಕೆ ಸಂಪುಟ ಒಪ್ಪಿಗೆ ನೀಡಲಿದೆ.


ಭವಿಷ್ಯದಲ್ಲಿ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರ ವಹಿಸಲು ಹಾಗೂ ಕಾನೂನನ್ನು ಬಿಗಿಗೊಳಿಸಿ ಮುಂದೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗುವುದನ್ನು ತಡೆಗಟ್ಟಲು ಈ ಕಠಿಣ ಕಾನೂನನ್ನು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.


ನಿನ್ನೆ ತಡರಾತ್ರಿ ನೀಟ್ ಅಕ್ರಮದ ವಿರುದ್ಧ ಪ್ರತಿಭಟನೆ ನಡೆಸಿರುವ ವಿದ್ಯಾರ್ಥಿ ಸಮುದಾಯಕ್ಕೆ ವಿಡಿಯೋ ಮೂಲಕ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರು, ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ. ಕಠಿಣ ಕಾನೂನು ರೂಪಿಸುತ್ತೇವೆ ಎಂದರು.


ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕೇಂದ್ರ ಸಮರ ಸಾರಿದೆ. ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಿಗಿಗೊಳಿಸುತ್ತೇವೆ. ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಮತ್ತು ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ಜಾರಿ ಬಗ್ಗೆ ಸಂಪುಟ ಸಭೆಯಲ್ಲಿ ಇಂದು ತೀರ್ಮಾನ ಮಾಡುತ್ತೇವೆ ಎಂದರು.


ಪ್ರಶ್ನೆ ಪತ್ರಿಕೆ ಸೋರಿಕೆ ಅಪರಾಧಿಗಳಿಗೆ ೧೦ ವರ್ಷದವರೆಗೂ ಜೈಲು ಶಿಕ್ಷೆ ವಿಧಿಸುವ ಹಾಗೂ ಭಾರೀ ದಂಡವನ್ನು ವಿಧಿಸುವ ಅಂಶಗಳು ಕಾನೂನಿನಲ್ಲಿ ಇರಲಿದೆ.
ಪ್ರಶ್ನೆ ಪತ್ರಿಕೆ ಸೋರಿ ಸಾಮಾನ್ಯ ವಿಷಯವಲ್ಲ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಪಡುವ ಕಷ್ಟ ವೇದನೆ ನನಗೂ ಅರ್ಥವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾದ ಮುಖ್ಯ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಅವರು ಜೈಲಿನಲ್ಲಿದ್ದಾರೆ. ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ವರ್ಷ ವ್ಯರ್ಥವಾಗಬಾರದು ಎಂಬುದು ಸರ್ಕಾರದ ಆದ್ಯತೆಯಾಗಿತ್ತು. ಹೀಗಾಗಿ ಸರ್ಕಾರ ತನ್ನ ಸಂಪೂರ್ಣ ಶಕ್ತಿ ಬಳಸಿ ಅಲ್ಪಾವಧಿಯಲ್ಲೇ ಮತ್ತೆ ನೀಟ್ ಪರೀಕ್ಷೆಯನ್ನು ನಡೆಸಿ ಜುಲೈ ೧೯ ರಂದೇ ಫಲಿತಾಂಶವನ್ನು ಪ್ರಕಟಿಸಿದೆ ಎಂದು ತಿಳಿಸಿದರು.


ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ತ್ವರಿತ ನ್ಯಾಯಾಲಯ ಸ್ಥಾಪಿಸುವ ಕರಡು ಪ್ರಸ್ತಾವವನ್ನು ಮಂಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೇವೆ. ನಾನು ಇಷ್ಟಕ್ಕೆ ತೃಪ್ತರಾಗುವುದಿಲ್ಲ. ಅಕ್ರಮ ಎಸಗಿದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.

  • ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ಬಿಗಿ
  • ಜೈಲು ಶಿಕ್ಷೆ ಹೆಚ್ಚಳ ಜೊತೆಗೆ ೧ ಕೋಟಿ ರೂ ತನಕ ದಂಡ
  • ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಕಠಿಣ ಕಾನೂನು
  • ಸಂಜೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯುವ ಸಾಧ್ಯತೆ
  • ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರಿಗೆ ಎಡೆ ಮುರಿ ಕಟ್ಟಲು ಎಲ್ಲ ಸಿದ್ಧತೆ
  • ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ಕಾಯ್ದೆ, ೨೦೨೪ ಕ್ಕೆ ತಿದ್ದುಪಡಿ ಮಸೂದೆ ಮಂಡಿಸಲು ಸಜ್ಜು
  • ಸಚಿವ ಸಂಪುಟದಲ್ಲಿ ಮಸೂದೆಗೆ ಸಮ್ಮತಿ ಪಡೆಯುವ ನಿರೀಕ್ಷೆ