
ನವದೆಹಲಿ, ಅ.೧೯- ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ ಲ್ಲಿ ಭಾರೀ ಅಕ್ರಮ ನಡೆದಿದ ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಭಾರೀ ಪ್ರತಿಭಟನೆ ನಡೆಸುತ್ತಿರುವ ಹೊತ್ತಲ್ಲೇ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿಯೆಟ್ನಾಂಗೆ ಹಾರಿದ್ದಾರೆ.
ನಿನ್ನೆಯೇ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹನೋಯ್ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸಗಳು ಈ ಹಿಂದೆಯೂ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದವು.
ವಿದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವ ಮೂಲಕ ರಾಹುಲ್ ಗಾಂಧಿ ಭಾರತದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ.
ಈ ವರ್ಷದ ಜನವರಿಯಲ್ಲಿಯೂ ರಾಹುಲ್ ಗಾಂಧಿ ವಿಯೆಟ್ನಾಂಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ, ವಿದೇಶಿ ಕಾರ್ಯಕ್ರಮಗಳಿಗೆ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸುವವರು ಯಾರು ಎಂಬುದನ್ನು ಕಾಂಗ್ರೆಸ್ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್ ನಿರಂತರವಾಗಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಜೊತೆ ಸೇರಿ ಮತಗಳ್ಳತನಕ್ಕೆ ಸಹಕರಿಸುತ್ತಿದ್ದಾರೆ ಎಂದು ಕಾಂಗ್ರೆಸ್ನ ಆರೋಪಿಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ಜ್ಞಾನೇಶ್ ಕುಮಾರ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಳೆದ ವಾರ ಸುಪ್ರೀಂ ಕೋರ್ಟ್ನಲ್ಲಿಯೂ ಅರ್ಜಿ ಸಲ್ಲಿಸಿದ್ದ ರಾಹುಲ್ ಗಾಂಧಿ, ಎಸ್ ಐಆರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದರು.
ಭಾನುವಾರ ದಕ್ಷಿಣ ಗೋವಾದ ಮಾರ್ಗೋವ್ನಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮತಗಳ್ಳತನದ ಆರೋಪದ ಕುರಿತು ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಜ್ಞಾನೇಶ್ ಕುಮಾರ್ ಮತಗಳ್ಳತನವನ್ನು ಜಾರಿಗೊಳಿಸುತ್ತಾರೆ, ಅಮಿತ್ ಶಾ ಅದನ್ನು ಕಾರ್ಯಗತಗೊಳಿಸುತ್ತಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ತೆರೆಮರೆಯಲ್ಲಿ ಸಂಪೂರ್ಣ ಯೋಜನೆ ರೂಪಿಸುತ್ತಾರೆ ಎಂದು ಅವರು ಆರೋಪಿಸಿದ್ದರು.
ಎಸ್ ಐಆರ್ ವಿವಾದ ಮತ್ತು ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ನ ಪ್ರತಿಭಟನೆಗಳು ಮುಂದುವರಿದಿರುವ ಸಂದರ್ಭದಲ್ಲೇ ರಾಹುಲ್ ಗಾಂಧಿ ವಿಯೆಟ್ನಾಂಗೆ ತೆರಳಿರುವುದು ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.


























