ನಾಳೆ ದೆಹಲಿಯಲ್ಲಿ ರಾಹುಲ್ ಭೇಟಿ

ಬೆಂಗಳೂರು, ಜ. ೧೫- ನಾಳೆ ದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿಯವರನ್ನು ಭೇಟಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.


ಬೆಂಗಳೂರಿನಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ದೆಹಲಿಯಲ್ಲಿ ಅಸ್ಸಾಂ ರಾಜ್ಯದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಸಭೆ ಇದೆ. ನಾನು ಚುನಾವಣಾ ವೀಕ್ಷಕನಾಗಿದ್ದು, ನಾಳಿನ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸ್ವಾಭಾವಿಕವಾಗಿ ರಾಹುಲ್‌ಗಾಂಧಿಯವರು ಸಭೆಯಲ್ಲಿ ಭಾಗಿಯಾಗುತ್ತಾರೆ. ಹಾಗಾಗಿ ಅವರನ್ನು ಭೇಟಿ ಮಾಡುತ್ತೇನೆ ಎಂದರು.


ನಾನು ಕೆಪಿಸಿಸಿ ಅಧ್ಯಕ್ಷ. ಲೋಕಸಭೆಯ ವಿರೋಧ ಪಕ್ಷದ ನಾಯಕರು, ಕಾಂಗ್ರೆಸ್ ಅಧ್ಯಕ್ಷರು ಎಲ್ಲಾ ನಾಯಕರನ್ನು ಭೇಟಿ ಮಾಡುವುದು, ದೂರವಾಣಿಯಲ್ಲಿ ಮಾತನಾಡುವುದು ಸಹಜ. ಇದಕ್ಕೆಲ್ಲಾ ಏನೇನೋ ವ್ಯಾಖ್ಯಾನಿಸುವ ಅಗತ್ಯವಿಲ್ಲ. ನಾನು ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.


ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗಲ್ಲ ಎಂಬ ಪೋಸ್ಟ್‌ನ್ನು ಹಲವರು ನಾನಾ ರೀತಿ ವ್ಯಾಖ್ಯಾನಿಸಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು.


ಕಾವೇರಿ ಆರತಿಗೆ ನ್ಯಾಯಾಲಯದಿಂದ ನಮಗೆ ಒಂದು ಪರಿಹಾರ ಸಿಕ್ಕಿದೆ. ಅದಕ್ಕಾಗಿಯೇ ನಾನು ಕಾವೇರಿ ಆರತಿಗೆ ದೇವರು ವರ ಕೊಟ್ಟಿದ್ದಾನೆ ಎಂಬ ಅರ್ಥದಲ್ಲಿ ಟ್ವೀಟ್ ಮಾಡಿದ್ದೆ. ಆದರೆ ಅದನ್ನು ಬೇರೆ ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಅವರು ಹೇಳಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭೇಟಿ ಮಾಡಿದ್ದರಲ್ಲಿ ತಪ್ಪೇನಿದೆ. ಅವರು ನಮ್ಮ ಅಧ್ಯಕ್ಷರು. ನಾವೆಲ್ಲಾ ಆಗಾಗ್ಗೆ ಭೇಟಿ ಮಾಡುತ್ತೇವೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಅವರು ರಾಜ್ಯದ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದರು.