
ಬೆಂಗಳೂರು, ಜೂ.೨೨- ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಜೂನ್ ೨೧ರಿಂದ ೨೭ರವರೆಗೆ ಹಲವು ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ ೨೧ರಿಂದಲೇ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಜೂನ್ ೨೪ರಿಂದ ೨೭ರವರೆಗೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ನದಿ-ಹಳ್ಳಗಳು ಉಕ್ಕುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೂನ್ ೨೨ ಮತ್ತು ೨೩ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದ ಗುಡ್ಡ ಕುಸಿತ, ರಸ್ತೆ ಸಂಚಾರದಲ್ಲಿ ವ್ಯತ್ಯಯ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಜೂನ್ ೨೨, ೨೩ ಹಾಗೂ ೨೫ರಂದು ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ, ಜೂನ್ ೨೧ರಂದು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗಂಟೆಗೆ ೩೦ರಿಂದ ೪೦ ಕಿ.ಮೀ ವೇಗದ ಗಾಳಿ ಸಹಿತ ಗುಡುಗು-ಬಿರುಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಜೂನ್ ೨೨ರಂದು ಭಾರೀ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.
ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಬಿಸಿ ಹಾಗೂ ಉಮಸಿನ ವಾತಾವರಣ ಮುಂದುವರಿಯಲಿದ್ದು, ನಂತರ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ೨೪ರಿಂದ ೪೮ ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ ೨೯ ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆ ಇದೆ.
ಭಾರೀ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ಪ್ರವಾಸಿಗರು ಹಾಗೂ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುಡ್ಡ ಕುಸಿತ ಹಾಗೂ ಜಲಾವೃತದ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.





























