
ಬೀದರ್, ಜು. ೪- ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ದ ಬಿಜೆಪಿಯ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವಹೇಳನಕಾರಿಯಾಗಿ ಮಾತನಾಡಿರುವುದು ಇಡೀ ಹೆಣ್ಣು ಕುಲಕ್ಕೆ ಮಾಡಿರುವ ಅವಮಾನ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು
ಬೀದರ್ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾತ್ತೆತ್ತಿದ್ದರೆ ರಾಮಾಯಣ, ರಾಮ-ಸೀತೆ ಕುರಿತು ಮಾತನಾಡುತ್ತಾ ಮಹಿಳೆಯರನ್ನು ಗೌರವಿಸಬೇಕು ಎಂದು ಹೇಳುತ್ತಾರೆ. ಇನ್ನೊಂದು ಕಡೆ ಕೆಟ್ಟದ್ದಾಗಿ ಮಾತನಾಡುತ್ತಾರೆ. ಇದು ಬಿಜೆಪಿಯವರ ಸಂಸ್ಕೃತಿ. ಇವರಿಗೆ ಮಾನ ಮರ್ಯಾದೆ ಇಲ್ಲ ಎಂದು ಹರಿಹಾಯ್ದರು.
ಬಿಜೆಪಿಯ ಪರಿಷತ್ ಸದಸ್ಯ ರವಿಕುಮಾರ್ ಅವರಿಗೆ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವ ಕೆಟ್ಟ ಚಾಳಿ ಬಿದ್ದಿದೆ. ಮಹಿಳೆಯರನ್ನು ಅಪಮಾನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಹಿಂಸೆ ಕೊಡುವುದು ಬಿಜೆಪಿಯ ಚಾಳಿಯಾಗಿದೆ. ಈ ಹಿಂದೆ ಸಿ.ಟಿ. ರವಿ ಅವರು ಸದನದಲ್ಲಿ ನನ್ನನ್ನು ನಿಂದಿಸಿದರು. ಇಂತಹವರು ಜನಪ್ರತಿನಿಧಿಯಾಗಿ ಇರಕೂಡದು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭದ್ರವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಜನನಾಯಕ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಘಟನಾ ಚತುರರಿದ್ದಾರೆ. ಇಬ್ಬರೂ ಒಟ್ಟಿಗೆ ಸೇರಿಕೊಂಡು ನುಡಿದಂತೆ ನಡೆಯುತ್ತಿದ್ದಾರೆ. ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದ್ದಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.