
ಕೆಜಿಎಫ್,ಅ.೮- ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕೆಜಿಎಫ್‌ನಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕಿ ಎಂ. ರೂಪಕಲಾ, ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲುವಿಗಾಗಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಪ್ರತಿಯೊಬ್ಬ ಪದವೀಧರ ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡಿ,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಬೇಕು. ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಬೆಂಬಲ ಕೋರಿ, ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮಸಂದ್ರ ನಾಗರಾಜ್, ನಗರಸಭೆ ಮಾಜಿ ಅಧ್ಯಕ್ಷ ಇಂದಿರಾಗಾಂಧಿ, ಕೆಡಿಎ ಅಧ್ಯಕ್ಷ ಶ್ರೀನಿವಾಸನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಇನಾಯತ್, ನಾರಾಯಣ ಸ್ವಾಮಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


























