Home ಮುಖಪುಟ ಸುದ್ದಿ ಎಸ್‌ಐಆರ್ ವಿಶೇಷ ಸಂಸತ್ ಅಧಿವೇಶನಕ್ಕೆ ಸಿದ್ಧ: ರಾಹುಲ್ ಗೆ ಶಾ ತಿರುಗೇಟು

ಎಸ್‌ಐಆರ್ ವಿಶೇಷ ಸಂಸತ್ ಅಧಿವೇಶನಕ್ಕೆ ಸಿದ್ಧ: ರಾಹುಲ್ ಗೆ ಶಾ ತಿರುಗೇಟು

ನವದೆಹಲಿ, ನ.೯- ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚಿಸಲು ವಿಶೇಷ ಸಂಸತ್ ಅಧಿವೇಶನ ಕರೆಯಲು ಸಿದ್ಧವಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ ಹೇಳಿದ್ದಾರೆ.


ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷ ಮತ್ತಷ್ಟು ತಾರಕಕ್ಕೇರಿರುವ ಬೆನ್ನಲ್ಲೇ ಅಮಿತ್ ಶಾ ರಿಂದ ಈ ಹೇಳಿಕೆ ಹೊರಬಿದ್ದಿದೆ.


ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಸ್ ಐಆರ್ ಅಕ್ರಮ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಮತ್ತೊಮ್ಮೆ ಸವಾಲು ಹಾಕಿದ್ದಾರೆ.


ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ ಬೆನ್ನಲ್ಲೇ ಅಮಿತ್ ಶಾ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.


ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಬೇಕು ಎಂದು ರಾಹುಲ್ ಗಾಂಧಿ ಹಲವು ಬಾರಿ ಆಗ್ರಹಿಸಿದ್ದಾರೆ. ಚರ್ಚೆಗೆ ಸ್ಥಳ ಮತ್ತು ಸಮಯವನ್ನು ಪ್ರಧಾನಿಯವರೇ ಆಯ್ಕೆ ಮಾಡಿಕೊಳ್ಳಲಿ. ಅಲ್ಲದೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಥವಾ ಉದ್ಯಮಿ ಗೌತಮ್ ಅದಾನಿ ಅವರಲ್ಲಿ ಯಾರಾದರೂ ಒಬ್ಬರು ಚರ್ಚೆಯ ಮಧ್ಯಸ್ಥಿಕೆ ವಹಿಸಲಿ ಎಂದು ರಾಹುಲ್ ವ್ಯಂಗ್ಯವಾಡಿದ್ದಾರೆ.


೨೦೨೫ರಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭವಾದಾಗಿನಿಂದಲೇ ಪ್ರತಿಪಕ್ಷಗಳು ಸಂಸತ್ತಿನಲ್ಲಿ ಈ ವಿಚಾರದ ಬಗ್ಗೆ ಚರ್ಚೆಗೆ ಒತ್ತಾಯಿಸುತ್ತಿದ್ದವು. ೨೦೨೫ರ ಮುಂಗಾರು ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಚರ್ಚೆ ನಡೆಸುವಂತೆ ಆಗ್ರಹಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ.


ಆಗಿನ ಲೋಕಸಭೆ ಸ್ಪೀಕರ್ ಬಲರಾಮ್ ಜಾಖರ್ ಅವರು ೧೯೮೦ರ ದಶಕದಲ್ಲಿ ನೀಡಿದ್ದ ತೀರ್ಪನ್ನು ಸರ್ಕಾರ ಉಲ್ಲೇಖಿಸಿತ್ತು. ಚುನಾವಣಾ ಆಯೋಗವು ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಅದರ ಕಾರ್ಯವೈಖರಿಯನ್ನು ಸಂಸತ್ತಿನಲ್ಲಿ ಚರ್ಚಿಸಲು ಸಾಧ್ಯವಿಲ್ಲ ಎಂಬುದು ಸರ್ಕಾರದ ವಾದವಾಗಿತ್ತು.
ನವೆಂಬರ್ ೬ರಂದು ವಿಶೇಷ ಸಂಸತ್ ಅಧಿವೇಶನ ನಡೆಸುವ ಕುರಿತು ಅಮಿತ್ ಶಾ ನೀಡಿದ ಹೇಳಿಕೆ ಹಾಗೂ ಅವರ ಹಿಂದಿನ ಲೋಕಸಭಾ ಭಾಷಣವನ್ನು ಹಂಚಿಕೊಂಡಿರುವ ರಾಹುಲ್ ಗಾಂಧಿ, ಅಮಿತ್ ಶಾ ಅವರಿಗೆ ನೇರವಾಗಿ ತಿರುಗೇಟು ನೀಡಿದ್ದಾರೆ.