
ಧಾರವಾಡ, ಜೂ.೨೧: ಜಿಲ್ಲೆಯಲ್ಲಿ ೧,೬೨೨ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸೂಚಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.
ಜಿಲ್ಲೆಯಲ್ಲಿರುವ ೧,೬೨೨ ಅಂಗನವಾಡಿ ಕೇಂದ್ರಗಳಲ್ಲಿ ೧,೫೭೧ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದು, ೫೧ ಹುದ್ದೆಗಳು ಖಾಲಿಯಿವೆ. ೧,೨೫೧ ಅಂಗನವಾಡಿ ಸಹಾಯಕಿಯರು ಸೇವೆ ಸಲ್ಲಿಸುತ್ತಿದ್ದು, ೩೭೧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕಿದೆ. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಬೇಕು. ಅಗಸ್ಟ್ ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು. ೧೭೦ ಅಂಗನವಾಡಿ ಕಟ್ಟಡಗಳು ಹೊಸದಾಗಿ ಮಂಜೂರಾಗಿವೆ. ಅದರಲ್ಲಿ ೧೧೧ ಕಟ್ಟಡಗಳು ಪೂರ್ಣಗೊಂಡಿದ್ದು, ೨೭ ಕಟ್ಟಡಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ೩೨ ಕಟ್ಟಡಗಳ ಕಾಮಗಾರಿಗಳು ನಡೆಯಬೇಕಿದೆ. ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರವನ್ನು ವಿತರಿಸಬೇಕು. ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಆಹಾರ ವಿತರಿಸಲು ಕ್ರಮ ವಹಿಸಬೇಕಾಗುತ್ತದೆ. ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಿಳೆಯರ ಮತ್ತು ಮಕ್ಕಳ ಮೇಲೆ ದೌರ್ಜನ್ಯಗಳು ನಡೆಯದಂತೆ ಗ್ರಾಮ ಪಂಚಾಯತ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳ ಕುರಿತು ವ್ಯಾಪಕ ಪ್ರಚಾರ ಮಾಡುವುದು ಅಗತ್ಯವಿದೆ. ಶಿಶುಪಾಲನಾ ಕೇಂದ್ರಗಳು ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಬೇಕು. ಬಾಲ್ಯ ವಿವಾಹ ತಡೆಗೆ ಕ್ರಮಗಳನ್ನು ಕೈಗೊಳ್ಳಬೇಕು. ಹುಬ್ಬಳ್ಳಿಯ ರಾಜ್ಯ ಮಹಿಳಾ ನಿಲಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅಧಿಕಾರಿಗಳಿಗೆ ತಿಳಿಸಿದರು.
ದರ್ಶನ ಸಾಂತ್ವನ ಕೇಂದ್ರ ಉಪ್ಪಿನ ಬೇಟಗೇರಿಯಲ್ಲಿ ಕಾರ್ಯನಿರ್ವಹಿಸಲಿ-
ಧಾರವಾಡದಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ ಸಾಂತ್ವನ ಕೇಂದ್ರವು ಉಪ್ಪಿನ ಬೇಟಗೇರಿಯಲ್ಲಿ ಕಾರ್ಯನಿರ್ವಹಿಸಲು ಮುಂದಾಗಬೇಕು. ಕೇಂದ್ರದ ಮೂಲ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಣೆ ಮಾಡಬೇಕಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಅಲ್ಲಪ್ಪ ಎಂ.ಬಡಿಗೇರ ಅವರು ಮಾತನಾಡಿ, ಪೋಕ್ಸೋ ದೂರುಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯದಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಅನುರಾಧಾ ವಸ್ತçದ, ಡಿಎಚ್‌ಓ ಡಾ.ಪರಶುರಾಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ ಪಾಟೀಲ, ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಕಮಲಾ ಬೈಲೂರು, ಡಿಡಿಪಿಐ ಉಮೇಶ ಬಮ್ಮಕ್ಕನವರ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಕಾಶೀನಾಥ ಭದ್ರಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

























