
ಚನ್ನಮ್ಮನ ಕಿತ್ತೂರು,ಸೆ ೨೩: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಹಾಗೂ ವಿವರಗಳನ್ನು ಪರಿಶೀಲಿಸಿಕೊಂಡು, ಲೋಪದೋಷಗಳಿದ್ದಲ್ಲಿ ಸರಿಪಡಿಸಿಕೊಳ್ಳಬೇಕು ಎಂದು ತಾಪಂ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಹೂಲಿ ಹೇಳಿದರು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಹಾಗೂ ವಿಶೇಷ ಮತದಾರರ ನೋಂದಣಿ ಅಭಿಯಾನ ಅಂಗವಾಗಿ ಜಿಲ್ಲಾಡಳಿತ, ಜಿಪಂ ಬೆಳಗಾವಿ ಹಾಗೂ ತಾಲೂಕು ಸ್ವೀಪ್ ಸಮಿತಿ ಚ.ಕಿತ್ತೂರು ವತಿಯಿಂದ ಪದವಿ ಪೂರ್ವ ಕಾಲೇಜಿನ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳಬೇಕು. ೧೮ ವರ್ಷ ಪೂರ್ಣಗೊಳಿಸಿರುವ ಅರ್ಹ ಯುವಜನರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಸಿಕೊಳ್ಳಬಹುದು. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರು ಹೆಸರು, ವಿಳಾಸ ಸೇರಿದಂತೆ ಇತರೆ ವಿವರಗಳಲ್ಲಿ ತಪ್ಪುಗಳಿದ್ದರೆ ಅಗತ್ಯ ತಿದ್ದುಪಡಿ ಮಾಡಿಸಿಕೊಳ್ಳಿ
ಮತದಾರರ ಪಟ್ಟಿಯಲ್ಲಿನ ವಿವರಗಳು ನಿಖರವಾಗಿರುವುದು ಅತ್ಯಂತ ಮುಖ್ಯ. ಸಾರ್ವಜನಿಕರು ತಮ್ಮ ಕುಟುಂಬದ ಎಲ್ಲ ಅರ್ಹ ಸದಸ್ಯರ ಹೆಸರುಗಳನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಸೇರ್ಪಡೆ, ವಿಳಾಸ ತಿದ್ದುಪಡಿ ಸೇರಿದಂತೆ ಅಗತ್ಯ ಬದಲಾವಣೆಗಳನ್ನು ಮಾಡಿಸಿಕೊಳ್ಳಲು ದೊರೆಯುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರು ಸಂಬAಧಪಟ್ಟ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಿ ಸಹಕರಿಸಬೇಕೆಂದರು.
ಇದಕ್ಕೂ ಪೂರ್ವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಏರ್ಪಟ್ಟಿತ್ತು.
ಈ ಕಾರ್ಯಕ್ರಮದಲ್ಲಿ ತಾಪಂ ಸಹಾಯಕ ನಿರ್ದೇಶಕ ವಿಜಯ ಪಾಟೀಲ, ಉಪನ್ಯಾಸಕ ಡಾ. ಬಸವರಾಜ ಅಂಬಿಗೇರಿ, ಪದವಿ ಪೂರ್ವ ಕಾಲೇಜ ಪ್ರಾಚಾರ್ಯ ಎಸ್.ಬಿ. ಪೆಂಟದ, ವಿಷಯ ನಿರ್ವಾಹಕ ಲಚ್ಚಪ್ಪ ಗೋಡಚಿ, ಯಲ್ಲಪ್ಪ ಹುಲಮನಿ, ಮಂಜುನಾಥ ಗುಂಡಿ, ಸೋಮಶೇಖರ ಚುಳಕಿ, ಸರೋಜ ಶಾಹಪೂರ ಇತರರಿದ್ದರು.























