Home ಜಿಲ್ಲೆ ಕಲಬುರಗಿ ಡಾ.ಶರಣಪ್ರಕಾಶ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಮನವಿ

ಡಾ.ಶರಣಪ್ರಕಾಶ ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಲು ಮನವಿ

ಚಿಂಚೋಳಿ,ಜೂ.೧- ಕರ್ನಾಟಕ ಸಚಿವ ಸಂಪುಟ ಪುನರ ರಚನೆಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ರಾಜ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವಂತೆ ಗರಗಪಳ್ಳಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗೋಪಾಲರೆಡ್ಡಿ ಚಂದ್ರರೆಡ್ಡಿಗರಗಪಳ್ಳಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರಿಗೆ ಒತ್ತಾಯಿಸಿದ್ದಾರೆ.
ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರು, ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೆ, ಇಡೀ ಕಲ್ಯಾಣ ಕರ್ನಾಟಕ ಭಾಗದ ಧ್ವನಿಯಾಗಿ ಬೆಳೆದಿದ್ದಾರೆ ಅವರ ದೂರದೃಷ್ಟಿ ಯೋಜನೆಯಿಂದ ಜನಮೆಚ್ಚಿದ ನಾಯಕರಾಗಿದ್ದು, ತಮ್ಮ ಮತಕ್ಷೇತ್ರದಲ್ಲಿ ಮೂಲಸೌಕರ್ಯ, ಶಿಕ್ಷಣ, ರಸ್ತೆ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಅಭೂತಪೂರ್ವ ಕೊಡುಗೆ ನೀಡುವ ಮೂಲಕ ಸಮಗ್ರ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿದ್ದಾರೆ.
ಪ್ರಸ್ತುತ ಅವರು ನಿರ್ವಹಿಸುತ್ತಿರುವ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಬಡವರಿಗೂ ಗುಣಮಟ್ಟದ ಉನ್ನತ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ಮಾಡಿದ್ದಾರೆ. ಕೌಶಲ್ಯಾಭಿವೃದ್ಧಿ ಇಲಾಖೆಯ ಮೂಲಕ ಯುವಜನತೆಗೆ ಉದ್ಯೋಗಾವಕಾಶ ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷ ಮತ್ತು ಸರ್ಕಾರ ನೀಡಿದ ಪ್ರತಿಯೊಂದು ಜವಾಬ್ದಾರಿಯನ್ನು ಅತ್ಯಂತ ನಿಷ್ಠೆ ಮತ್ತು ದಕ್ಷತೆಯಿಂದ ನಿಭಾಯಿಸಿ ಸೈ ಎನಿಸಿಕೊಂಡಿದ್ದಾರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಬಲ ನಾಯಕರಾಗಿ ಹೊರಹೊಮ್ಮಿರುವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಇಡೀ ಭಾಗದ ಜನರಿಗೆ ನೀಡುವ ಗೌರವವಾಗಿದೆ ಅವರಿಗೆ ಈ ಉನ್ನತ ಜವಾಬ್ದಾರಿ ನೀಡಿದರೆ, ಅವರ ಆಡಳಿತಾತ್ಮಕ ಅನುಭವದಿಂದ ರಾಜ್ಯದಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೆ ತಂದು ಇಡೀ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಆದ್ದರಿಂದ ಕಾಂಗ್ರೆಸ್ ಹೈಕಮಾಂಡ್ ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಂಡು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಗೋಪಾಲರೆಡ್ಡಿ ಚಂದ್ರರೆಡ್ಡಿ ಗರಗಪಳ್ಳಿ, ಅವರು ಮನವಿ ಮಾಡಿದ್ದಾರೆ.