Home ಜಿಲ್ಲೆ ವಿಕಲಚೇತನ ಪೋಷಕರ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಮನವಿ

ವಿಕಲಚೇತನ ಪೋಷಕರ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಮನವಿ

ಹುಮನಾಬಾದ್,ಅ.೨೫: ವಿಕಲಚೇತನ ಪೋಷಕರ ಮಕ್ಕಳಿಗೆ ಶಿಕ್ಷಣದಲ್ಲಿ ವಿಶೇಷ ಮೀಸಲಾತಿ, ವಿದ್ಯಾರ್ಥಿವೇತನ ಹಾಗೂ ಇತರ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾನ್ಯ ಸದಸ್ಯರಿಗೆ ಮನವಿ ಸಲ್ಲಿಸಲಾಗಿದೆ.
ವಿಕಲಚೇತನ ಪೋಷಕರು ಆರ್ಥಿಕ ಸಂಕಷ್ಟ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಕುಟುಂಬಗಳ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಉತ್ತಮಗೊಳಿಸುವ ಉದ್ದೇಶದಿಂದ ಸರ್ಕಾರಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಮೀಸಲಾತಿ ಕಲ್ಪಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಮನವಿಯಲ್ಲಿ ಕೋರಲಾಗಿದೆ.
ಅಲ್ಲದೆ, ಅರ್ಹ ಮಕ್ಕಳಿಗೆ ವಿಶೇಷ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಉಚಿತ ಪಠ್ಯಪುಸ್ತಕಗಳು, ಕಲಿಕಾ ಸಾಮಗ್ರಿಗಳು ಹಾಗೂ ವಸತಿ ಸೌಲಭ್ಯಗಳನ್ನು ಒದಗಿಸಬೇಕು. ವಿಕಲಚೇತನ ಪೋಷಕರ ಮಕ್ಕಳ ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ನಡೆಸಿ, ಅವರ ಶಿಕ್ಷಣ ಮತ್ತು ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಕಲ್ಯಾಣ ಯೋಜನೆ ರೂಪಿಸಲು ಸರ್ಕಾರದ ಗಮನ ಸೆಳೆಯಬೇಕೆಂದು ಮನವಿ ಮಾಡಲಾಗಿದೆ.
ವಿಕಲಚೇತನ ಪೋಷಕರ ಮಕ್ಕಳಿಗೂ ಇತರ ಮಕ್ಕಳಂತೆ ಸಮಾನ ಶೈಕ್ಷಣಿಕ ಅವಕಾಶಗಳು ದೊರೆಯಬೇಕು. ಈ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ರಾಜ್ಯ ಸರ್ಕಾರಕ್ಕೆ ಸೂಕ್ತ ಶಿಫಾರಸು ಮಾಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಜಗನ್ನಾಥ ಗಾರಿ ಗಂಗಾರಾಮ, ಪ್ರಭು, ಶ್ರೀಕಾಂತ, ಶಾಂತಕುಮಾರ, ಜ್ಞಾನೋಬಾ, ಉಮಾದೇವಿ,ಮಾಣಿಕರೆಡ್ಡಿ, ಕವಿತಾ, ದಿಲೀಪ್, ಅನೀಲಕುಮಾರ,ರಾಜಶೇಖರ, ಈಶ್ವರ,ಶಶಿಕಲಾ,ರಾಜೇಂದ್ರ ಸೇರಿದಂತೆ ಅನೇಕರಿದ್ದರು.