Home ಮುಖಪುಟ ಸುದ್ದಿ ನಾಳೆಗೆ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಮುಕ್ತಾಯ

ನಾಳೆಗೆ ಎಸ್‌ಐಆರ್ ಮತದಾರರ ಪಟ್ಟಿ ಪರಿಷ್ಕರಣೆ ಮುಕ್ತಾಯ

ಬೆಂಗಳೂರು:ಅ,೨೨:ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಾಳೆಗೆ ಮುಕ್ತಾಯಗೊಳ್ಳಲಿದ್ದು, ಬೆಂಗಳೂರಿನಲ್ಲಿ ಸುಮಾರು ೫೮ ಲಕ್ಷ ಮಂದಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಸುಮಾರು ೫೭ ಲಕ್ಷ ಮಂದಿಯನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದ್ದು, ಮಾಹಿತಿ ಅಪೂರ್ಣವಾಗಿರುವುದು ಹಾಗೂ ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ೨೪ ಲಕ್ಷ ಮಂದಿಗೆ ನೋಟಿಸ್ ನೀಡಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.


ಎಸ್‌ಐಆರ್ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮತದಾರರ ಮಾಹಿತಿಯನ್ನು ದೃಢೀಕರಿಸುವುದು ಹಾಗೂ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

೫.೪೩ ಲಕ್ಷ ಅರ್ಜಿ ಸಲ್ಲಿಕೆ:


ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಒಟ್ಟು ೫.೪೩ ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಹೊಸ ಮತದಾರರ ಸೇರ್ಪಡೆಗಾಗಿ ಫಾರ್ಮ್-೬ ಮೂಲಕ ೨.೨೧ ಲಕ್ಷ ಅರ್ಜಿಗಳು ಬಂದಿವೆ. ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಬಳಸುವ ಫಾರ್ಮ್-೭ ಮೂಲಕ ಕೇವಲ ೫ ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ.
ಇನ್ನು, ಮತದಾರರ ವಿವರಗಳಲ್ಲಿ ತಿದ್ದುಪಡಿ ಮಾಡುವುದು ಹಾಗೂ ವಿಳಾಸ ಬದಲಾವಣೆಗೆ ಸಂಬಂಧಿಸಿದಂತೆ ಫಾರ್ಮ್-೮ ಮೂಲಕ ೩.೧೨ ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳ ಪರಿಶೀಲನೆ ಬಳಿಕ ಸುಮಾರು ೨ ಲಕ್ಷ ಹೊಸ ಮತದಾರರು ಪಟ್ಟಿಗೆ ಸೇರ್ಪಡೆಯಾಗುವ ನಿರೀಕ್ಷೆಯಿದೆ. ಇದರಿಂದ ಒಟ್ಟು ಸೇರ್ಪಡೆಯಾಗುವ ಮತದಾರರ ಸಂಖ್ಯೆ ಸುಮಾರು ೫೮ ಲಕ್ಷಕ್ಕೆ ತಲುಪಬಹುದು ಎಂದು ಅಂದಾಜಿಸಲಾಗಿದೆ.

ಎಎಸ್‌ಡಿಡಿಒ ಪಟ್ಟಿಯಲ್ಲಿರುವವರಿಗೂ ಅವಕಾಶ:


ಈಗಾಗಲೇ ಎಎಸ್‌ಡಿಡಿಒ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮತದಾರರಿಗೂ ತಮ್ಮ ದಾಖಲೆಗಳನ್ನು ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ವಿಶೇಷ ಎಸ್‌ಎಸ್‌ಎಸ್ ಅಭಿಯಾನದ ಮೂಲಕ ಸೇರ್ಪಡೆ ಪ್ರಕ್ರಿಯೆ ನಡೆಸಲು ವ್ಯವಸ್ಥೆ ಮಾಡಲಾಗುವುದು ಎಂದು ಮಹೇಶ್ವರ್ ರಾವ್ ತಿಳಿಸಿದರು.


ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಿಂದ ಯಾವುದೇ ಮತದಾರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿಯೊಂದು ಹಂತದಲ್ಲಿಯೂ ಮಾಹಿತಿ ಹಾಗೂ ದಾಖಲೆಗಳ ಪರಿಶೀಲನೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿದೆ. ಅರ್ಜಿಗಳ ಪರಿಶೀಲನೆ ಮತ್ತು ದೃಢೀಕರಣದ ಬಳಿಕ ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದರು.